ಕಾವೇರಿ ನದಿ ನೀರಿನ ಮಟ್ಟ ಏರಿಕೆ: ನದಿ ಬಳಿ ಸಾರ್ವಜನಿಕರ ಪ್ರವೇಶ ನಿಷೇಧ

ಕೆ.ಆರ್.ಎಸ್.ಜಲಾಶಯದಿಂದ 50,000 ದಿಂದ 80,000 ಕ್ಯೂಸೆಕ್ಸ್ ನೀರು ಬಿಡುಗಡೆಯ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗುವ ಹಂತ ತಲುಪಿರುವ ಕಾರಣ ಮುಂಜಾಗೃತಾ ಕ್ರಮವಾಗಿ 30 ಸಾವಿರ ಕ್ಯೂಸೆಕ್ ನೀರನ್ನು ಅಣೆಕಟ್ಟೆಯಿಂದ ನದಿಗೆ ಹರಿಸಲಾಗುತ್ತಿದೆ.ಗರಿಷ್ಠ 124.80 ಅಡಿಗಳ ನೀರಿನ ಸಂಗ್ರಹ ಸಾಮರ್ಥ್ಯವುಳ್ಳ ಇಲ್ಲಿನ ಕನ್ನಂಬಾಡಿ ಅಣೆಕಟ್ಟೆಯಲ್ಲಿ ಪ್ರಸ್ತುತ 120.90 ಅಡಿ ಸಂಗ್ರಹವಾಗಿದ್ದು, 23,315 ಕ್ಯೂಸೆಕ್ ಒಳ ಹರಿವಿದೆ. ಮಡಿಕೇರಿ, ಭಾಗಮಂಡಲ ಸೇರಿದಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಅಣೆಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ. ಹಾಗಾಗಿ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದ್ದು, 50 ಸಾವಿರ ಕ್ಯೂಸೆಕ್ ವರಗೂ ನೀರನ್ನು ಬಿಡುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳು ನದಿ ತೀರ ಪ್ರದೇಶದ ಜನತೆಗೆ ಸೂಚನೆ ನೀಡಿದ್ದಾರೆ.

ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿ ನದಿ ತೀರದ ಪ್ರದೇಶಗಳಾದ ಕಾರೇಕುರ, ರಂಗನತಿಟ್ಟು, ಶ್ರೀರಂಗಪಟ್ಟಣ ಟೌನಿನ ಸ್ನಾನಘಟ್ಟ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಭ ದೇವಸ್ಥಾನ, ಸಂಗಮ್, ಘೋಸಾಯ್ ಘಾಟ್, ಪಶ್ಚಿಮವಾಹಿನಿ ಸ್ಥಳಗಳಲ್ಲಿ ಸಾರ್ವಜನಿಕರು ನದಿ ಬಳಿಗೆ ಹೋಗದಂತೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಶ್ರೀರಂಗಪಟ್ಟಣ ತಹಶೀಲ್ದಾ‌ರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ.