ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಅಮಾನವೀಯ ಹಲ್ಲೆ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸಗಿರಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಅನಾಚಾರ ಇನ್ನೂ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.
ಇದೀಗ ಮತ್ತೊಮ್ಮೆ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದ ಘಟನೆ ಮೂಲಕ ಸಾಬೀತಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿ ನಿರತರಾಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು ಈ ಬಾರಿ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಶ್ರೀರಾಮಸೇನೆಯವರು ರಕ್ಷಿಸಿದ್ದ ಗೋವುಗಳನ್ನು ಇಂಗಳಿಯ ಗೋ ಶಾಲೆಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ನಿನ್ನೆ ಸಂಜೆ ಈ ಗೋವುಗಳನ್ನು ಮತ್ತೆ ಸ್ಥಳಾಂತರ ಮಾಡುತ್ತಿದ್ದವರ ಮೇಲೆ ಅನುಮಾನ ಬಂದು ಕೆಲ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿ ಪ್ರಶ್ನಿಸಿದರು.
ಇದೇ ವಿಚಾರಣೆಯ ಬೆನ್ನಲ್ಲೇ ಪುಂಡರು ಐದು ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಬಿದ್ದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ.