ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂ ಕುಸಿತ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು, ಶಾಸಕರು ಆದ ಆರ್.ವಿ.ದೇಶಪಾಂಡೆ ಅವರು ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅವರು ಮುಂದುವರಿದು ಮಾತನಾಡಿ, ಕೊಡಸಳ್ಳಿ ಸಮೀಪ ಬಾಳೆ ಮನೆ ಬಳಿ ಮನೆ ಕುಸಿತ ಹಾಗೂ ಭಾರೀ ಗುಡ್ಡ ಕುಸಿತ ಸಂಭವಿಸಿದ್ದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಭೂಕುಸಿತ ಉಂಟಾಗಿರುವ ಸ್ಥಳಕ್ಕೆ ತಾಲೂಕಾಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ ಮತ್ತು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ಕರ್ನಾಟಕ ರಾಜ್ಯ ವಿದ್ಯುತ್ ನಿಗಮದವರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಮಣ್ಣಿನಿಂದ ಮುಚ್ಚಲ್ಪಟ್ಟ ರಸ್ತೆಯನ್ನು ಆದಷ್ಟು ಬೇಗ ಸಂಚಾರಕ್ಕೆ ಮುಕ್ತಗೊಳಿಸಬೇಕು. ಜಿಲ್ಲೆಯಾದ್ಯಂತ ಈ ಪರಿಸ್ಥಿತಿ ಇದ್ದು, ಸಂಭವನೀಯ ಭೂ ಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಆರ್.ವಿ.ದೇಶಪಾಂಡೆ ಕೋರಿದ್ದಾರೆ.