ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ರಾಜ್ಯ ಹೈಕೋರ್ಟ್ ಸಿಬಿಐಗೆ ವಹಿಸಿದ್ದು, ಇದು ಬಿಜೆಪಿ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದ್ದು, ಅಭಿವೃದ್ಧಿ ಕೆಲಸಕಾರ್ಯಗಳು ಕುಂಠಿತವಾಗಿವೆ, ರೈತರ ಸಮಸ್ಯೆಗಳಿಗೂ ಸ್ಪಂದಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಮುಖಿಯಾಗಿದೆ. ಇದರಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗುವಂತಾಗಿದೆ. ಆಡಳಿತ ವ್ಯವಸ್ಥೆ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ, ಆಡಳಿತ ಪಕ್ಷಗಳ ಶಾಸಕರೇ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣ, ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರಿ ಹೋಗುತ್ತಿದೆ ಎಂದರು