ಹುಬ್ಬಳ್ಳಿ: ಪಹಲ್ಗಾಮ್‌ನಲ್ಲಿ ಧರ್ಮದ ಹೆಸರು ಕೇಳಿ ಭಯೋತ್ಪಾದಕರು ಗುಂಡು ಹೊಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವರ ಕೃತ್ಯ ಸಮರ್ಥಿಸಿಕೊಳ್ಳುತ್ತಿರುವುದನ್ನು ನೋಡಿದರೆ, ಭಯೋತ್ಪಾದಕರಿಗೆ ಅವರಿಗೆ ಯಾವ ವ್ಯತ್ಯಾಸವೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆ ರಾಜಕಾರಣದ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಿಷ ಹೇಳಿಕೆ ನೀಡುತ್ತಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ಧ ಬೇಡ ಎಂದು ಹೇಳುವ ಮೂಲಕ ಮತಬ್ಯಾಂಕ್ ರಾಜಕಾರಣಕ್ಕಾಗಿ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ. ಸರಿ ತಪ್ಪು ಪ್ರಧಾನಿ ನರೇಂದ್ರ ಮೋದಿಯವರಿಗೆ ಗೊತ್ತಿದೆ ಎಂದರು.
ಪಾಕಿಸ್ತಾನದ ಕುಕೃತ್ಯ ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂತಹ ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಯವರು ಹೇಳುತ್ತಿರುವುದೇ ಬೇರೆ ಎಂದರು.
ಪಹಲ್ಗಾಮ್ ಘಟನೆಗೆ ಕೇಂದ್ರ ಸರ್ಕಾರದ ಭದ್ರತಾ ಲೋಪವೇ ಕಾರಣ ಎನ್ನುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವ ಪರಿಸ್ಥಿತಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಏನಿದೆ ಎಂದು ತಿಳಿದುಕೊಳ್ಳಲಿ. ರಾಷ್ಟ್ರ ಸಂರಕ್ಷಣೆಯ ವಿಚಾರದಲ್ಲಿ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇಶ ರಕ್ಷಣೆಯ ವಿಚಾರವಾಗಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.