ರಾಜ್ಯಾದ್ಯಂತ ಹೊಸದಾಗಿ 184 ಇಂದಿರಾ ಕ್ಯಾಂಟೀನ್‌

ಮೈಸೂರು:ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಮೈಸೂರಿನ ಹಿನಕಲ್‌ನಲ್ಲಿಂದು ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿ 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್‌ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ. ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್‌ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.