ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಮಧ್ಯಾಹ್ನ ಇ–ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ರವಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ–ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ–ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸುತ್ತೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ತಿಳಿಸಿದ್ದಾರೆ.