ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮವನ್ನು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಜೂನ್ 21ರಂದು ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕರಾದ ಕೆ.ಸಿ. ವೇಣುಗೋಪಾಲ, ರಣದೀಪ್‌ಸಿಂಗ್ ಸುರ್ಜೇವಾಲ್, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರು, ಸಂಸದರು, ಮಾಜಿ ಸಚಿವರು ಮುಂತಾದವರು ಭಾಗವಹಿಸುವರು ಎಂದರು.
ಈ ಕಾರ್ಯಕ್ರಮದ ಮೂಲಕ ಮುಂಬರುವ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿ ಚುನಾವಣೆಗೆ ತಯಾರಿಗೆ ಸಹಕಾರಿ ಆಗಲಿದೆ. ಕಳೆದ 6 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆಗೆ ಶ್ರಮಿಸಿದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮ ಪಕ್ಷದ ಸಂಘಟನೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದರು.




















