ಶಾಲಾ ಕಟ್ಟಡಗಳ ದುಸ್ಥಿತಿಗೆ ಸರ್ಕಾರವೇ ಹೊಣೆ: ಕಲಬುರಗಿ ಮಾದರಿ ಇದೇನಾ? – ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ
ಬೆಂಗಳೂರು: ಕಲಬುರಗಿ ಜಿಲ್ಲೆಯ ಎರಡು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದೇ ವಾರದ ಅವಧಿಯಲ್ಲಿ ಮೇಲ್ಛಾವಣಿ ಕುಸಿದ ಘಟನೆಗಳನ್ನು ಉಲ್ಲೇಖಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಇಂದಿನ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ವರದಿಯನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜ್ಯದ ಸರ್ಕಾರಿ ಶಾಲೆಗಳು ಇಂದು “ಸಾವಿನ ಗೂಡು”ಗಳಾಗಿ ಪರಿವರ್ತನೆಯಾಗಿವೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಶಿಕ್ಷಣ ಇಲಾಖೆಗೆ ಪೂರ್ಣ ಪ್ರಮಾಣದ ಸಚಿವರ ಕೊರತೆ ಹಾಗೂ ಜಿಲ್ಲೆಗೆ ಉಸ್ತುವಾರಿ ವ್ಯವಸ್ಥೆಯ ನಿರ್ಲಕ್ಷ್ಯವೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.
ಅಶೋಕ್ ಅವರ ಪ್ರಕಾರ, ಜೂನ್ 12ರಂದು ಕಲಬುರಗಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ತರಗತಿ ಕೊಠಡಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ಮೇಲ್ಛಾವಣಿಯ ಭಾಗ ಕುಸಿದು ಬಿದ್ದ ಪರಿಣಾಮ ಹಲವು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಕೆಲ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ಉಲ್ಲೇಖಿಸಿದ್ದಾರೆ.
ಇದೇ ರೀತಿ ಜೂನ್ 14ರಂದು ಆಳಂದ ತಾಲೂಕಿನ ಸಂಗೋಳಗಿ (ಸಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲ್ಛಾವಣಿಯ ಪ್ಲಾಸ್ಟರ್ ಕುಸಿದಿರುವ ಘಟನೆ ನಡೆದಿದ್ದು, ಭಾನುವಾರ ರಜೆ ದಿನವಾಗಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಿದ್ದಾರೆ. ಶಾಲೆಯಲ್ಲಿ ಸಾಮಾನ್ಯ ದಿನದ ತರಗತಿಗಳು ನಡೆಯುತ್ತಿದ್ದರೆ ನೂರಾರು ಮಕ್ಕಳ ಜೀವ ಅಪಾಯಕ್ಕೆ ಸಿಲುಕಬಹುದಾಗಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ : ಕಲಬುರಗಿ ಜಿಲ್ಲೆಯಲ್ಲಿಯೇ ಈ ಘಟನೆಗಳು ನಡೆದಿರುವುದನ್ನು ಉಲ್ಲೇಖಿಸಿರುವ ಅಶೋಕ್, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸಚಿವರು ಜಿಲ್ಲೆಯ ಸರ್ಕಾರಿ ಶಾಲೆಗಳ ದುಸ್ಥಿತಿಯತ್ತ ಗಮನ ಹರಿಸಿಲ್ಲ ಎಂದು ಆರೋಪಿಸಿದ್ದಾರೆ.
ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ಶಿಕ್ಷಕರು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿಲ್ಲ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.
ಶಿಕ್ಷಣ ಇಲಾಖೆಯ ಕಾರ್ಯವೈಖರಿ ಪ್ರಶ್ನೆ : ರಾಜ್ಯದ ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆಯನ್ನು ಪ್ರಶ್ನಿಸಿರುವ ಅಶೋಕ್, ಇಲಾಖೆಗೆ ಪೂರ್ಣ ಪ್ರಮಾಣದ ಸಚಿವರಿಲ್ಲದಿರುವುದನ್ನು ಗಂಭೀರ ವಿಷಯವಾಗಿ ಪ್ರಸ್ತಾಪಿಸಿದ್ದಾರೆ. ಬಡ ಮಕ್ಕಳ ಶಿಕ್ಷಣ ಹಾಗೂ ಸುರಕ್ಷತೆಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದ್ದಾರೆ.
ಅಲ್ಲದೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನೂ ಟೀಕಿಸಿರುವ ಅವರು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಆದ್ಯತೆ ನೀಡಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸುರಕ್ಷತಾ ಆಡಿಟ್‌ಗೆ ಆಗ್ರಹ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ತಕ್ಷಣ ಸಮಗ್ರ “ಸುರಕ್ಷತಾ ಆಡಿಟ್” ನಡೆಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ. ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ಗುರುತಿಸಿ ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ಯಾವುದೇ ಸರ್ಕಾರದ ಮೊದಲ ಆದ್ಯತೆಯಾಗಿರಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.



















