SK Home Ad
Home ನಮ್ಮ ಜಿಲ್ಲೆ ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ಸುಪ್ರೀಂ ಸೂಚನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ಸುಪ್ರೀಂ ಸೂಚನೆ

0
66

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ನಡೆಯುತ್ತಿರುವ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಪ್ರಕರಣದ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ಒಟ್ಟು 273 ಸಾಕ್ಷಿದಾರರ ಪೈಕಿ ಇದುವರೆಗೆ ಅಲ್ಪ ಸಂಖ್ಯೆಯ ಸಾಕ್ಷಿಗಳಷ್ಟೇ ವಿಚಾರಣೆಗೆ ಒಳಗಾಗಿರುವುದನ್ನು ಉಲ್ಲೇಖಿಸಿ ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದಾರೆ. ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದರ ಕುರಿತು ನ್ಯಾಯಾಂಗ ಪ್ರಕ್ರಿಯೆ ಮುಂದುವರಿದಿದೆ.

ಆದರೆ, ದರ್ಶನ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ತಿರಸ್ಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ದಿನನಿತ್ಯದ ಆಧಾರದಲ್ಲಿ ಮುಂದುವರಿಸುವಂತೆ ಹಾಗೂ ಪ್ರಮುಖ ಸಾಕ್ಷಿಗಳ ಪರೀಕ್ಷೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದೆ. ಜೊತೆಗೆ, ವಿಚಾರಣಾಧೀನ ಕೈದಿಗೆ ಕಾನೂನಿನ ಪ್ರಕಾರ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರ ವಿರುದ್ಧ ರೇಣುಕಾಸ್ವಾಮಿ ಅಪಹರಣ ಮತ್ತು ಹತ್ಯೆ ಆರೋಪಗಳಿದ್ದು, ಬೆಂಗಳೂರಿನ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ಮುಂದುವರಿದಿದೆ. ಪ್ರಕರಣದ ಮುಂದಿನ ವಿಚಾರಣೆಯತ್ತ ರಾಜ್ಯಾದ್ಯಂತ ಗಮನ ಸೆಳೆದಿದೆ.