SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಶಾಲಾ ಸಿಬ್ಬಂದಿ ಭಿನ್ನಾಭಿಪ್ರಾಯ: ಮುಖ್ಯ ಶಿಕ್ಷಕರ ಆತ್ಮಹತ್ಯೆ ಯತ್ನ

ಶಾಲಾ ಸಿಬ್ಬಂದಿ ಭಿನ್ನಾಭಿಪ್ರಾಯ: ಮುಖ್ಯ ಶಿಕ್ಷಕರ ಆತ್ಮಹತ್ಯೆ ಯತ್ನ

0
108

ಶಾಲೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮುಖ್ಯ ಶಿಕ್ಷಕ; ಭಿನ್ನಾಭಿಪ್ರಾಯವೇ ಕಾರಣ ಎಂಬ ಶಂಕೆ

ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರೊಬ್ಬರು ಶಾಲಾ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದ್ದು, ಶಿಕ್ಷಣ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕೊಕ್ಕನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆತ್ಮಹತ್ಯೆಗೆ ಯತ್ನಿಸಿದವರು ಎಂದು ತಿಳಿದುಬಂದಿದೆ. ಶಾಲೆಯ ಸಹಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯ ಶಿಕ್ಷಕರ ನಡುವೆ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: BJP ಗೆಲುವಿನ ವಿರುದ್ಧ TMC ನಾಯಕಿಯ ಕಾನೂನು ಸಮರ

ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಉಂಟಾಗಿದ್ದ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಸೋಮವಾರ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ರಾಜಿ ಸಂಧಾನ ಸಭೆ ನಡೆಸಲಾಗಿತ್ತು. ಆದರೆ ಆ ಸಭೆಯಲ್ಲಿ ಸಮಸ್ಯೆಗೆ ಸಂಪೂರ್ಣ ಪರಿಹಾರ ದೊರಕಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಆರ್‌ಸಿ ಅಧಿಕಾರಿಗಳ ನೇತೃತ್ವದಲ್ಲಿ ಮತ್ತೊಂದು ಸಭೆಯನ್ನು ಆಯೋಜಿಸಲಾಗಿತ್ತು.

ಸಭೆ ನಡೆಯುತ್ತಿದ್ದ ವೇಳೆ ಮುಖ್ಯ ಶಿಕ್ಷಕರು ಅವರು ಶೌಚಾಲಯಕ್ಕೆ ತೆರಳಿದ್ದು, ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರು ಅವರನ್ನು ತಕ್ಷಣ ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ!

ಪ್ರಸ್ತುತ ಅವರು ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಘಟನೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಏನು, ಶಾಲೆಯೊಳಗಿನ ಭಿನ್ನಾಭಿಪ್ರಾಯಗಳೇ ಇದಕ್ಕೆ ಕಾರಣವೇ ಅಥವಾ ಬೇರೆ ಯಾವುದೇ ಅಂಶಗಳಿವೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ಆತಂಕ : ಸೋಂಕಿತನಿಗೆ ವೆಂಟಿಲೇಟರ್ ಬೆಂಬಲ

ಸ್ಥಳೀಯ ಮೂಲಗಳ ಪ್ರಕಾರ, ಶಾಲೆಯ ಆಡಳಿತಾತ್ಮಕ ವಿಚಾರಗಳು ಹಾಗೂ ಸಿಬ್ಬಂದಿಯ ನಡುವಿನ ಭಿನ್ನಾಭಿಪ್ರಾಯಗಳಿಂದಾಗಿ ಕಳೆದ ಕೆಲವು ದಿನಗಳಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಹಂತಗಳಲ್ಲಿ ಸಂಧಾನ ಸಭೆ ನಡೆಸಲಾಗಿದ್ದರೂ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯದ ಕಾರಣ ಮುಖ್ಯ ಶಿಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಆದರೆ ಘಟನೆಗೆ ಸಂಬಂಧಿಸಿದ ನಿಖರ ಕಾರಣ ಪೊಲೀಸ್ ತನಿಖೆ ಪೂರ್ಣಗೊಂಡ ನಂತರವೇ ಸ್ಪಷ್ಟವಾಗಲಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೂ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.