ದಾವಣಗೆರೆ: ಸಹಶಿಕ್ಷಕರೊಂದಿಗೆ ನಡೆದಿದ್ದ ಜಗಳದ ಆರೋಪದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ಜಯಪ್ಪ (55) ಮೃತ ಮುಖ್ಯಶಿಕ್ಷಕ, ಅವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ವಿಷ ಸೇವಿಸಿದ್ದ ಶಿಕ್ಷಕ ಜಯಪ್ಪ ಅವರು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಶಾಲೆಯಲ್ಲಿ ಸಹ ಶಿಕ್ಷಕರು, ಅಡುಗೆ ಕೆಲಸದವರು ಹಾಗೂ ಮುಖ್ಯ ಶಿಕ್ಷಕರ ನಡುವೆ ಕೆಲ ದಿನಗಳಿಂದ ಭಿನ್ನಾಭಿಪ್ರಾಯ ಮತ್ತು ಜಗಳ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಆರ್‌ಸಿ ಹಾಗೂ ಎಸ್‌ಡಿಎಂಸಿ ನೇತೃತ್ವದಲ್ಲಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಭೆ ನಡೆಸಿ ರಾಜಿ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು.
ಆದರೆ ಸಭೆ ನಡೆಯುವ ವೇಳೆ ಜಯಪ್ಪ ಅವರು ಮಧ್ಯದಲ್ಲೇ ಎದ್ದು ಶಾಲೆಯ ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳೀಯ ಗ್ರಾಮಸ್ಥರು ಅವರನ್ನು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗೆ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.




















