SK Home Ad
Home ನಮ್ಮ ಜಿಲ್ಲೆ ಉಡುಪಿ ಹೋಂ ಸ್ಟೇ ಮೇಲೆ ದಾಳಿ: MDMA ಸಹಿತ 7 ಮಂದಿ ಪೊಲೀಸ್ ವಶಕ್ಕೆ

ಹೋಂ ಸ್ಟೇ ಮೇಲೆ ದಾಳಿ: MDMA ಸಹಿತ 7 ಮಂದಿ ಪೊಲೀಸ್ ವಶಕ್ಕೆ

0
98
ಸಾಂದರ್ಭಿಕ ಚಿತ್ರ

ಸಂ.ಕ. ಸಮಾಚಾರ, ಉಡುಪಿ: ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದಲ್ಲಿರುವ ವಿಶ್ರಾಮ್ ಹೋಂ ಸ್ಟೇ ಮೇಲೆ ಶುಕ್ರವಾರ ಮಲ್ಪೆ ಪೊಲೀಸರು ದಿಢೀರ್ ದಾಳಿ ನಡೆಸಿ ಗಾಂಜಾ, ಎಂಡಿಎಂಎ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಖಚಿತ ಮಾಹಿತಿಯ ಆಧಾರದ ಮೇಲೆ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ., ಪಿಎಸ್ಐ ಗಂಗಪ್ಪ ಎಸ್. ಮತ್ತು ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ಇದನ್ನೂ ಓದಿ: ಒಡಿಶಾ ಪಠ್ಯಪುಸ್ತಕಗಳಲ್ಲಿ 1,678 ದೋಷಗಳು: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ದಾಳಿ ವೇಳೆ ಹೋಂ ಸ್ಟೇಯ ಒಂದು ಕೊಠಡಿಯಲ್ಲಿ ಇದ್ದ ಎಫ್.ಎಂ. ನಾಜೀಲ್, ಮೊಹಮ್ಮದ್ ಅಜರುದ್ದೀನ್, ಮೊಹಮ್ಮದ್ ಅಫ್ನಾನ್ ಹಾಗೂ ವಿಘ್ನೇಶ್ ಎಂಬ ನಾಲ್ವರನ್ನು ಪೊಲೀಸರು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವರು ಮಾದಕ ವಸ್ತು ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಪಂಚರ ಸಮ್ಮುಖದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 33.81 ಗ್ರಾಂ ಗಾಂಜಾ, 9.73 ಗ್ರಾಂ ಎಂಡಿಎಂಎ, ಐದು ಮೊಬೈಲ್ ಫೋನ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ₹3 ಸಾವಿರ ಹಾಗೂ ಎಂಡಿಎಂಎ ಮಾದಕ ವಸ್ತುವಿನ ಮೌಲ್ಯ ಸುಮಾರು ₹20 ಸಾವಿರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದ ಎರಡು ಪ್ರಮುಖ ಕೋರ್ಟ್‌ಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ

ಪೊಲೀಸರ ತನಿಖೆಯಲ್ಲಿ ಮತ್ತೊಂದು ಮಹತ್ವದ ಅಂಶವೂ ಬೆಳಕಿಗೆ ಬಂದಿದೆ. ಮಲ್ಪೆ ಪೊಲೀಸ್ ಠಾಣೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಹೋಂ ಸ್ಟೇ ನಡೆಸದಂತೆ ಈ ಹಿಂದೆ ನೋಟಿಸ್ ನೀಡಲಾಗಿದ್ದರೂ, ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಹೋಂ ಸ್ಟೇ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ, ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಹೋಂ ಸ್ಟೇ ಮಾಲೀಕ ಧನ್ವತ್ ರಿಕ್ವಿತ್ ಮತ್ತು ಅಲ್ಲಿನ ಕೆಲಸಗಾರ ಬಸವರಾಜ್ ಅವರನ್ನು ಕೂಡ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಜಿನಾ ಎಂಬಾಕೆಯನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 62,370 ಟನ್ LNG ಹೊತ್ತು ಗುಜರಾತ್‌ ಬಂದರು ಸೇರಿದ ‘ದಿಶಾ’ ನೌಕೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇಧಿಸಲು ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಈ ದಾಳಿಯೂ ಅಂತಹ ಕ್ರಮಗಳ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.