ಕುಷ್ಟಗಿ: ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಬೆಳ್ಳಂಬೆಳಿಗ್ಗೆ ಕುಷ್ಟಗಿಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ 105 ರೌಡಿಶೀಟರ್‌ಗಳ ಪೈಕಿ ಆಕ್ಟಿವ್ ಇರುವಂತಹ 20ಕ್ಕೂ ಅಧಿಕ ರೌಡಿಶೀಟರ್‌ಗಳ ಮನೆಗಳಿಗೆ ಪಿಎಸ್ಐ ಹನುಮಂತಪ್ಪ ತಳವಾರ್ ತಂಡದೊಂದಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ರೌಡಿಶೀಟರ್‌ಗಳ ಚಲನವಲನ, ಹಾಜರಾತಿ, ಚಟುವಟಿಕೆಗಳು ಹಾಗೂ ಇತ್ತೀಚಿನ ವರ್ತನೆಗಳು ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸ್ಥಿತಿ ಹಾಗೂ ಪ್ರಸ್ತುತ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು. ಪೊಲೀಸ್ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸಿ, ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ರೌಡಿ ಶೀಟರ್‌ಗಳು ಠಾಣಾ ವ್ಯಾಪ್ತಿಯಲ್ಲೇ ವಾಸವಾಗಿದ್ದಾರೆಯೇ, ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಯೇ ಹಾಗೂ ಕಾನೂನು ಉಲ್ಲಂಘನೆಯ ಬಗ್ಗೆ ಯಾವುದೇ ದೂರುಗಳಿವೆಯೇ ಎಂಬುದನ್ನು ಪರಿಶೀಲಿಸಿದರು.
ಇತ್ತೀಚೆಗೆ ಹಬ್ಬ-ಹರಿದಿನಗಳು, ಜಾತ್ರೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಪರಿಶೀಲನೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ರೌಡಿ ಶೀಟರ್‌ಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳು, ನ್ಯಾಯಾಲಯದ ಷರತ್ತುಗಳು ಹಾಗೂ ಪೊಲೀಸ್ ಠಾಣೆಗೆ ಹಾಜರಾಗುವ ನಿಯಮಗಳ ಪಾಲನೆ ಬಗ್ಗೆ ಅಧಿಕಾರಿಗಳು ಪರಿಶೀಲಿಸಿದರು.
ಪಿಎಸ್ಐ ಹನುಮಂತಪ್ಪ ತಳವಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಮತ್ತು ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡಿದ್ದು, ರೌಡಿಶೀಟರ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವುದು ಹಾಗೂ ಅಪರಾಧಿಗಳಿಗೆ ಎಚ್ಚರಿಕೆ ನೀಡುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಪೊಲೀಸ್ ಇಲಾಖೆ ಮುಂದಿನ ದಿನಗಳಲ್ಲಿಯೂ ಇಂತಹ ಅನಿರೀಕ್ಷಿತ ತಪಾಸಣೆ ಮತ್ತು ಪರಿಶೀಲನಾ ಕಾರ್ಯಾಚರಣೆಗಳನ್ನು ಮುಂದುವರಿಸಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ, ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಪೊಲೀಸರು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಪ್ರದೇಶದಲ್ಲಿ ನಡೆಯುವ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದರು. ಸಮಾಜದಲ್ಲಿ ಭಯದ ವಾತಾವರಣ ನಿರ್ಮಿಸುವ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕ್ರೈಂ ಪಿಎಸ್ಐ ಪುಂಡಲಿಕಪ್ಪ, ಶರಣಪ್ಪ, ಭರಮಪ್ಪ ವಾಲಿಕಾರ, ಈರಪ್ಪ, ತಾಯಪ್ಪ, ಸಂಗಮೇಶ ರಾಜೂರು, ಯಂಕೋಬ, ಅಂಬರೀಶ, ಮಾರುತಿ ಪೂಜಾರ, ಶಿವರಾಜ, ಪರಶುರಾಮ ಕಮ್ಮಾರ ಇದ್ದರು.





















