SK Home Ad
Home ನಮ್ಮ ಜಿಲ್ಲೆ ಬಳ್ಳಾರಿ ಶಾಸಕ ಗಣೇಶ್ ಪರ ಬೀದಿಗಿಳಿದ ಬೆಂಬಲಿಗರು: ಸಚಿವ ಸ್ಥಾನಕ್ಕೆ ಆಗ್ರಹ

ಶಾಸಕ ಗಣೇಶ್ ಪರ ಬೀದಿಗಿಳಿದ ಬೆಂಬಲಿಗರು: ಸಚಿವ ಸ್ಥಾನಕ್ಕೆ ಆಗ್ರಹ

0
103

ಬಳ್ಳಾರಿ: ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬುಧವಾರ ನೂರಾರು ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಏಳು ತಾಯಿ ಮಕ್ಕಳ ದೇವಸ್ಥಾನದಿಂದ ರಾಯಲ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಶಾಸಕ ಗಣೇಶ್ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪರಿಣಾಮವಾಗಿ ರಾಯಲ್ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ED ರೈಡ್: ಅಬಕಾರಿ ಹೆಚ್ಚುವರಿ ಆಯುಕ್ತರ ನಿವಾಸ ಸೇರಿ 6 ಕಡೆ ದಾಳಿ

ಪ್ರತಿಭಟನಾಕಾರರು ಮಾತನಾಡಿ, ಕಂಪ್ಲಿ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜೆ.ಎನ್. ಗಣೇಶ್ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಜನಸೇವಕನಾಗಿ ಗುರುತಿಸಿಕೊಂಡಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಆಗ್ರಹಿಸಿದರು.

ಇದಲ್ಲದೆ, ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಅಳಿಯ ಸುರೇಶ್ ಬಾಬು ಅವರನ್ನು ಸತತ ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದಲ್ಲಿ ಬಲಪಡಿಸುವಲ್ಲಿ ಗಣೇಶ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬೆಂಬಲಿಗರು ಹೇಳಿದರು.

ಇದನ್ನೂ ಓದಿ: ಅಗ್ನಿ ಅವಘಡ: ಉದ್ಯೋಗ ಭವನ ಬಳಿ 200ಕ್ಕೂ ಅಧಿಕ ಶೆಡ್‌ಗಳು ಭಸ್ಮ!

ಕಂಪ್ಲಿ ಕ್ಷೇತ್ರ ರಚನೆಯಾದ ಬಳಿಕ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಗಣೇಶ್ ಅವರ ಕೊಡುಗೆ ಮಹತ್ವದ್ದಾಗಿದೆ. ಬಳ್ಳಾರಿ ಜಿಲ್ಲೆಯ ನಾಲ್ಕು ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ರಜನಿಕಾಂತ್ 173ನೇ ಸಿನಿಮಾಗೆ ‘ಧರ್ಮನ್’ ಹೆಸರು ಫಿಕ್ಸ್!

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಶಾಸಕ ಗಣೇಶ್ ಪರವಾಗಿ ಬೆಂಬಲಿಗರು ನಡೆಸಿದ ಈ ಪ್ರತಿಭಟನೆಗೆ ರಾಜಕೀಯ ಮಹತ್ವ ಸಿಕ್ಕಿದೆ.