ಕೊಪ್ಪಳದ ಮುನಿರಾಬಾದ್‌ನಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲೋಕಾರ್ಪಣೆ ಕಾರ್ಯಕ್ರಮಕ್ಕೂ ಮುನ್ನ, ಬೆಂಬಲಿಗರಿಗೆ ವೇದಿಕೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಡಾ ಅಧ್ಯಕ್ಷ ಹಾಸನಸಾಬ್ ದೋಟಿಹಾಳ್ ಮತ್ತು ಡಿವೈಎಸ್ಪಿ ಸಿದ್ದನಗೌಡ ನಡುವೆ ವಾಗ್ವಾದ ನಡೆದಿದೆ.
ಕೊಪ್ಪಳ: ತುಂಗಭದ್ರಾ ಜಲಾಶಯದ 33 ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೂ ಮುನ್ನ ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷ ಹಾಸನಸಾಬ್ ದೋಟಿಹಾಳ್ ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ವೇದಿಕೆ ಮೇಲೆಯೇ ವಾಗ್ವಾದ ನಡೆದಿರುವುದು ಗಮನ ಸೆಳೆದಿದೆ.
ಇದನ್ನೂ ಓದಿ: ವೆನೆಜುವೆಲಾ: ಭೂಕಂಪದ ಅಟ್ಟಹಾಸ – 7.5 ಕಂಪನಕ್ಕೆ ದೇಶವೇ ತಲ್ಲಣ!
ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿರುವ ಮಹತ್ವದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನಿರಾಬಾದ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.
ಮುಖ್ಯಮಂತ್ರಿಗಳು ಆಗಮಿಸುವ ಮುನ್ನವೇ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ್ದ ಕಾಡಾ ಅಧ್ಯಕ್ಷ ಹಾಸನಸಾಬ್ ದೋಟಿಹಾಳ್, ತಮ್ಮ ಬೆಂಬಲಿಗರಿಗೆ ವೇದಿಕೆ ಪ್ರವೇಶ ನಿರಾಕರಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಡಿವೈಎಸ್ಪಿ ಸಿದ್ದನಗೌಡ ಅವರೊಂದಿಗೆ ಹಾಸನಸಾಬ್ ದೋಟಿಹಾಳ್ ಮಾತಿನ ಚಕಮಕಿ ನಡೆಸಿದರು.
ಇದನ್ನೂ ಓದಿ: ಜಿಂದಾಲ್ ಏರ್‌ಪೋರ್ಟ್‌ಗೆ ಬಂದಿಳಿದ ಕರ್ನಾಟಕ, ಆಂಧ್ರ ಮುಖ್ಯಮಂತ್ರಿಗಳು!
ವೇದಿಕೆ ಮೇಲೆ ಅನಧಿಕೃತ ವ್ಯಕ್ತಿಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಆದರೆ, ತಮ್ಮ ಬೆಂಬಲಿಗರನ್ನು ಒಳಗೆ ಬಿಡಬೇಕೆಂದು ಕಾಡಾ ಅಧ್ಯಕ್ಷರು ಒತ್ತಾಯಿಸಿದ್ದು, ಈ ವೇಳೆ ಎರಡೂ ಪಕ್ಷಗಳ ನಡುವೆ ಕೆಲಕಾಲ ವಾಗ್ವಾದ ನಡೆಯಿತು ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ ನಂತರ ವಾಗ್ವಾದ ಶಮನಗೊಂಡಿತು. ಬಳಿಕ ಕಾರ್ಯಕ್ರಮದ ಸಿದ್ಧತೆಗಳು ಎಂದಿನಂತೆ ಮುಂದುವರಿದವು.
ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಅಧ್ಯಾಯ: ನಕಲಿ ಪ್ರತಿಗಳ ಬಗ್ಗೆ NCERT ಎಚ್ಚರಿಕೆ!
ತುಂಗಭದ್ರಾ ಜಲಾಶಯದ 33 ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.




















