ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ ನೀಡಲು ಅನುಮೋದನೆ ನೀಡಿದೆ.
ಬೆಂಗಳೂರು: ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಲ್ಹಾದ ಜೋಶಿ, ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ತೋತಾಪುರಿ ಮಾವು ಬೆಳೆಗಾರರು ಗಂಭೀರ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (Price Deficiency Payment Scheme – PDPS) ಅಡಿಯಲ್ಲಿ ನೆರವು ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: 3 ರಾಜ್ಯಗಳು ಒಟ್ಟಾಗಿ ನೀರಾವರಿ ಸಮಸ್ಯೆ ಬಗೆಹರಿಸೋಣ: ಡಿಕೆ
ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ ನೀಡಲು ಅನುಮೋದನೆ ನೀಡಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
“ರಾಜ್ಯದ ಮಾವು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಈ ನಿರ್ಧಾರವು ಸಾವಿರಾರು ರೈತ ಕುಟುಂಬಗಳಿಗೆ ನೇರವಾಗಿ ನೆರವಾಗಲಿದ್ದು, ಅವರ ಆರ್ಥಿಕ ಸ್ಥಿರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ” ಎಂದು ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಕನ್ನಡ ಪಠ್ಯಪುಸ್ತಕ ವಿವಾದ: ‘ಕೃಷ್ಣ’ ಹೆಸರಿನ ಬಗ್ಗೆ NCERT ಸ್ಪಷ್ಟನೆ
ಇದೇ ವೇಳೆ, ರೈತರ ಕಲ್ಯಾಣಕ್ಕೆ ಸದಾ ಬದ್ಧವಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿರುವ ಜೋಶಿ, ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂಬುದನ್ನು ಈ ನಿರ್ಧಾರ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.
ತೋತಾಪುರಿ ಮಾವು ಬೆಳೆಗೆ ಈ ವರ್ಷ ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರ ರಾಜ್ಯದ ಮಾವು ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ.



















