ಕೊಪ್ಪಳ ಹೆದ್ದಾರಿಯಲ್ಲಿ ಭೀಕರ ಅವಘಡ: ಮಂತ್ರಾಲಯ ಯಾತ್ರೆ ದುರಂತದಲ್ಲಿ ಅಂತ್ಯ: ಕೊಪ್ಪಳದಲ್ಲಿ ನಾಲ್ವರು ಬಲಿ, ಆರು ಮಂದಿಗೆ ಗಾಯ – ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲು ಬೊಮ್ಮಾಯಿ ಆಗ್ರಹ
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರಾಗಿದ್ದಾರೆ.
ಮೃತರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಎಂದು ಗುರುತಿಸಲಾಗಿದೆ. ಇವರು ಸೇರಿದಂತೆ ಗ್ರಾಮಸ್ಥರ ತಂಡವು ಓಮಿನಿ ವಾಹನದಲ್ಲಿ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದರು.
ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಪಕ್ಕದ ರಸ್ತೆಯಿಂದ ವೇಗವಾಗಿ ಬರುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ದಾಟಿ ಎದುರು ದಿಕ್ಕಿನಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಓಮಿನಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸಾರ್ವಜನಿಕರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಗೊಂಡ ಆರು ಮಂದಿಯನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಘಟನೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಈ ದುರಂತ ಅತ್ಯಂತ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ಘೋಷಿಸಿ, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.






















