ದಾವಣಗೆರೆ: ಲಘು ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 21 ವರ್ಷದ ಯುವಕ ಮೃತಪಟ್ಟ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸೃಜನ್ (21) ಎಂದು ಗುರುತಿಸಲಾಗಿದೆ. ಲಘು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸೃಜನ್‌ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಶಸ್ತ್ರಚಿಕಿತ್ಸಾ ಕೊಠಡಿಯಿಂದ ಹೊರತಂದ ಕೆಲವೇ ನಿಮಿಷಗಳಲ್ಲಿ ಅವರು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ರೋಧನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಆವರಣದಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ.





















