ಹಾವೇರಿ: ಕಾರಹುಣ್ಣಿಮೆ ಅಂಗವಾಗಿ ನಡೆದ ಹೋರಿ ಓಟದ ವೇಳೆ ಪಟಾಕಿ ಹಚ್ಚುವ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾದ ಗಲಾಟೆಯಿಂದ ಕೋಮು ಉದ್ವಿಗ್ನತೆಗೆ ಉಂಟಾಗಿ 8 ಜನರು ಗಾಯಗೊಂಡ ಘಟನೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಸೀದಿ ಸಮೀಪ ಹೋರಿ ಓಟ ನಡೆಯುತ್ತಿದ್ದ ವೇಳೆ ಪಟಾಕಿ ಹಚ್ಚುವ ವಿಷಯಕ್ಕೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಲೋಹಿತ್ ಕುರುಬರ, ಶಿವರಾಜ ಕುರುಬರ, ನಾಗಪ್ಪ ಕುರುಬರ, ಜಯಪ್ಪ ಕುರುಬರ, ನಿಂಗರಾಜ ಕುರುಬರ ಹಾಗೂ ಮಲ್ಲಪ್ಪ ಕೊಡಮಗ್ಗಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಭಾಷಾಸಾಬ್ ಗೌಂಡಿ, ಖಾಜಾ ಗೌಂಡಿ ಎಂಬುವರು ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಹಾನಗಲ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ನರೇಗಲ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಿದ್ದಾರೆ. ಸದ್ಯ ನರೇಗಲ್ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.






















