SK Home Ad
Home ನಮ್ಮ ಜಿಲ್ಲೆ ಬಾಗಲಕೋಟೆ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಸಚಿವರ ಸೂಚನೆ

ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಸಚಿವರ ಸೂಚನೆ

0
45

ಹವಾಮಾನ ವೈಪರೀತ್ಯ: ಬಾಗಲಕೋಟೆಯಲ್ಲಿ ಎಂ.ಬಿ. ಪಾಟೀಲ ಮಹತ್ವದ ಸಭೆ – ಜಾನುವಾರುಗಳಿಗೆ ಮೇವು, ನೀರಿನ ಲಭ್ಯತೆ ಖಚಿತಪಡಿಸಿಕೊಳ್ಳಿ

ಬಾಗಲಕೋಟೆ : ಹವಾಮಾನ ವೈಪರೀತ್ಯ, ಎಲ್ ನಿನೊ ಪರಿಣಾಮ ಹಾಗೂ ಮಳೆ ಕೊರತೆಯ ಸಾಧ್ಯತೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಪರಿಶೀಲಿಸಲಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: SIR ಪ್ರಕ್ರಿಯೆಗೆ ನೆರವಾಗಲು ಶಾಶ್ವತ ನಿವಾಸ ಪ್ರಮಾಣಪತ್ರ: CM

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ. ಪಾಟೀಲ, ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ : ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಇದನ್ನೂ ಓದಿ: ಮತದಾರರಲ್ಲದವರಿಗೆ ಗ್ಯಾರಂಟಿ ಏಕೆ?‌ ಸಿಎಂ ಪ್ರಶ್ನೆ

ಅದೇ ರೀತಿ, ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಮೇವು ಲಭ್ಯವಾಗುವಂತೆ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ರೈತರು ಮತ್ತು ಪಶುಸಂಗೋಪನಾ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಜಲಾಶಯಗಳ ನೀರಿನ ಮಟ್ಟ ಪರಿಶೀಲನೆ : ಸಭೆಯಲ್ಲಿ ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳ ನೀರಿನ ಮಟ್ಟ ಹಾಗೂ ವಿವಿಧ ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಇದನ್ನೂ ಓದಿ: SIR: ಧಾರವಾಡ ಡಿಸಿ ಜೊತೆ ಸಂಯುಕ್ತ ಕರ್ನಾಟಕ ಅರ್ಥಪೂರ್ಣ ಫೋನ್ ಇನ್

ಸಭೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಆರ್. ಬಿ. ತಿಮ್ಮಾಪುರ, ಶಾಸಕರಾದ ಜಿ. ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ, ಸಿದ್ದು ಸವದಿ, ಭೀಮಸೇನ ಚಿಮನಕಟ್ಟಿ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.