ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಲಿಟಲ್ ಫ್ಲವರ್ ಶಾಲೆಯಲ್ಲಿ ಟಿಸಿ (ವರ್ಗಾವಣೆ ಪ್ರಮಾಣಪತ್ರ) ಪಡೆಯಲು ಬಂದಿದ್ದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಶಿಕ್ಷಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದ ಬಾಲಕ ಟಿಸಿ ಪಡೆಯಲು ಶಾಲೆಗೆ ಬಂದಿದ್ದ ವೇಳೆ, ಶಿಕ್ಷಕರೊಂದಿಗೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ತೀವ್ರಗೊಂಡಾಗ ವಿದ್ಯಾರ್ಥಿ ತನ್ನ ಬ್ಯಾಗ್‌ನಿಂದ ಚಾಕು ತೆಗೆದು ಶಿಕ್ಷಕನ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ.
ದಾಳಿಯಲ್ಲಿ ಶಿಕ್ಷಕರ ಕೈ ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶಾಲೆಯ ಸಿಬ್ಬಂದಿ ಕೂಡಲೇ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಹಲ್ಲೆಗೆ ಬಳಸಿದ ಚಾಕುವನ್ನು ಆನ್‌ಲೈನ್ ಮೂಲಕ ಖರೀದಿಸಲಾಗಿತ್ತು. ಘಟನೆ ಪೂರ್ವಯೋಜಿತವಾಗಿತ್ತೇ ಎಂಬ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.
ಆರೋಪಿ ಅಪ್ರಾಪ್ತನ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಳಿಕ ಶಾಲಾ ಆಡಳಿತವು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ ಕೈಗೊಂಡಿದೆ. ಈ ಘಟನೆ ಮಕ್ಕಳಲ್ಲಿ ಹೆಚ್ಚುತ್ತಿರುವ ಹಿಂಸಾತ್ಮಕ ಪ್ರವೃತ್ತಿಯ ಬಗ್ಗೆ ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕ ಮೂಡಿಸಿದೆ.






















