ಯಾದಗಿರಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಿ ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಯಾದಗಿರಿ ತಾಲೂಕಿನ ಹೊಸಳ್ಳಿ ತಾಂಡಾದ ನಿವಾಸಿ ಸಂತೋಷ್ ರಾಠೋಡ್ ಶಿಕ್ಷೆಗೆ ಗುರಿಯಾದ ಆರೋಪಿ. 2018ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ್ದ. ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ದೂರಿನ ಮೇರೆಗೆ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮರುಳಸಿದ್ದರಾಧ್ಯ ಎಚ್. ಪ್ರಧಾನ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ₹5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದರು.






















