ಬೆಳಗಾವಿ: ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ ನೀರಿನ ಸಮಸ್ಯೆ ಇರುವಂತಹ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕರುಗಳ ಮನವಿ ಮೇರೆಗೆ ಮೋಡ ಬಿತ್ತನೆಗೆ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಯಾವುದೇ ಇಲಾಖೆ ವತಿಯಿಂದ ರಸ್ತೆ ಕಾಮಗಾರಿಗಳ ಆರಂಭಿಸುವ ಪೂರ್ವ ಹಾಗೂ ನಂತರದ ಫೋಟೋ ದಾಖಲೆಗಳ ಸಮೇತ ಬಿಲ್ ಮಾಡಬೇಕು. ಯಾವುದೇ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿರುವುದರ ಫೋಟೋ ದಾಖಲೆ ಇಟ್ಟಿರಬೇಕು. ನಕಲಿ ದಾಖಲೆ ಸೃಷ್ಟಿಸಿ ಬಿಲ್ ಪಡೆದಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.





















