SK Home Ad
Home ಸುದ್ದಿ ರಾಜ್ಯ ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

0
101

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ನಿರಂತರವಾಗಿ ಕುಸಿಯುತ್ತಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಹಂಚಿಕೊಂಡಿರುವ ಅವರು, ಯುಡೈಸ್ ಪ್ಲಸ್ (UDISE+) ವರದಿಯ ಅಂಕಿ-ಅಂಶಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೋಶಿ ಅವರ ಪ್ರಕಾರ, 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಟ್ಟು 1,19,26,303 ವಿದ್ಯಾರ್ಥಿಗಳು ದಾಖಲಾತಿಯಾಗಿದ್ದರು. ಆದರೆ 2024-25ರಲ್ಲಿ ಈ ಸಂಖ್ಯೆ 1,17,80,251ಕ್ಕೆ ಇಳಿಕೆಯಾಗಿದ್ದು, ಒಂದೇ ವರ್ಷದಲ್ಲಿ 1,46,052 ವಿದ್ಯಾರ್ಥಿಗಳ ಕುಸಿತ ದಾಖಲಾಗಿದೆ. 2025-26ನೇ ಸಾಲಿನಲ್ಲಿ ಮತ್ತಷ್ಟು 66,037 ವಿದ್ಯಾರ್ಥಿಗಳು ಕಡಿಮೆಯಾಗಿದ್ದು, ಒಟ್ಟು ದಾಖಲಾತಿ 1,17,14,214ಕ್ಕೆ ತಲುಪಿದೆ.

ಈ ಮೂಲಕ ಕಳೆದ ಮೂರು ವರ್ಷಗಳಲ್ಲಿ ಒಟ್ಟು 2,12,089 ಮಕ್ಕಳು ಸರ್ಕಾರಿ ಶಾಲೆಗಳನ್ನು ತೊರೆದಿರುವುದು ಶಿಕ್ಷಣ ಕ್ಷೇತ್ರದ ದುಸ್ಥಿತಿಯನ್ನು ಬಿಂಬಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಪರ ಆಡಳಿತವನ್ನು ಮರೆತು ಒಳಜಗಳ, ಕುರ್ಚಿ ಕಿತ್ತಾಟ ಮತ್ತು ರಾಜಕೀಯ ಲೆಕ್ಕಾಚಾರದಲ್ಲೇ ಮುಳುಗಿರುವ ಪರಿಣಾಮ ಆಡಳಿತ ಯಂತ್ರ ಸಂಪೂರ್ಣವಾಗಿ ಕುಂಠಿತಗೊಂಡಿದೆ. ಇದರ ನೇರ ಪರಿಣಾಮ ಶಿಕ್ಷಣ ಕ್ಷೇತ್ರದ ಮೇಲೆ ಬಿದ್ದಿದ್ದು, ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಬೇಕಿದ್ದ ಸರ್ಕಾರಿ ಶಾಲೆಗಳು ಇಂದು ಸಂಕಷ್ಟದ ಪರಿಸ್ಥಿತಿಗೆ ತಲುಪಿವೆ ಎಂದು ಜೋಶಿ ಟೀಕಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಶಿಕ್ಷಕರ ಅಭಾವ ಹಾಗೂ ಶೈಕ್ಷಣಿಕ ಗುಣಮಟ್ಟದ ಕುಸಿತದಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಕಳುಹಿಸುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಕರ್ನಾಟಕದಲ್ಲಿ ಡ್ರಗ್ಸ್ ಸಮಸ್ಯೆ ಹೆಚ್ಚುತ್ತಿರುವುದರ ಬಗ್ಗೆಯೂ ಆತಂಕ ವ್ಯಕ್ತಪಡಿಸಿರುವ ಅವರು, ಶಿಕ್ಷಣ ಮತ್ತು ಯುವಜನರ ಭವಿಷ್ಯವನ್ನು ಭದ್ರಗೊಳಿಸಬೇಕಾದ ಸರ್ಕಾರ ಈ ಕ್ಷೇತ್ರಗಳಲ್ಲಿ ಸಮರ್ಪಕ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಸರಿಯಾದ ಶಿಕ್ಷಣ ಮತ್ತು ಮಾರ್ಗದರ್ಶನ ಸಿಗದಿದ್ದರೆ ಯುವಜನತೆ ಸಮಾಜ ವಿರೋಧಿ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

ಆದರೆ ಈ ಆರೋಪಗಳಿಗೆ ರಾಜ್ಯ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.