SK Home Ad
Home ನಮ್ಮ ಜಿಲ್ಲೆ ಉಡುಪಿ ಉಡುಪಿಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿ: ಏಳು ಮಂದಿಗೆ ಗಾಯ

ಉಡುಪಿಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿ: ಏಳು ಮಂದಿಗೆ ಗಾಯ

0
59

ಉಡುಪಿ : ಖಾಸಗಿ ಶಾಲೆಯ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು, ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶುಕ್ರವಾರ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸರಳಬೆಟ್ಟು-ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ.

ಅಪಘಾತಕ್ಕೀಡಾದ ಬಸ್ ಉಡುಪಿಯ ಕ್ರೈಸ್ಟ್ ಶಾಲೆಗೆ ಸೇರಿದ್ದಾಗಿದೆ. ಶಾಲಾ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಕೊಡಂಗೆ ದೇವಸ್ಥಾನದ ಸಮೀಪ ಬಸ್ಸನ್ನು ರಿವರ್ಸ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

ಘಟನೆಯ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಬಸ್ಸಿನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದು ಸಮೀಪದ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಸ್ ಪಲ್ಟಿಯಾಗಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಳಿಜಾರು ಪ್ರದೇಶದಲ್ಲಿ ಬಸ್ಸನ್ನು ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ವ್ಯಕ್ತವಾಗಿದ್ದು, ಬಸ್‌ನ ತಾಂತ್ರಿಕ ದೋಷ ಅಥವಾ ಇತರ ಕಾರಣಗಳ ಕುರಿತೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳ ಪೋಷಕರು ಆಸ್ಪತ್ರೆ ಮತ್ತು ಅಪಘಾತ ನಡೆದ ಸ್ಥಳಕ್ಕೆ ಧಾವಿಸಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.