SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಆಗ್ರಹ

ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಆಗ್ರಹ

0
62

ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಬೇಕಾದರೂ ನಡೆಯುವ ಸಾಧ್ಯತೆ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟವಾಗಲಿದೆ ಎಂದು ತಿಳಿಸಿದರು.

ಈ ವೇಳೆ ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಯನ್ನು ಅವರು ಪುನರುಚ್ಚರಿಸಿದರು. ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಗೆ ಜನಸಂಖ್ಯೆ ಹಾಗೂ ರಾಜಕೀಯ ಪ್ರತಿನಿಧಿತ್ವದ ಆಧಾರದ ಮೇಲೆ ಹೆಚ್ಚಿನ ಅವಕಾಶ ಸಿಗಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ

ಸಚಿವ ಸ್ಥಾನ ಕೇಳುವುದು ತಪ್ಪಲ್ಲ : ಉತ್ತರ ಕರ್ನಾಟಕದಲ್ಲಿ ತಾನೊಬ್ಬನೇ ಅಲ್ಪಸಂಖ್ಯಾತ ಶಾಸಕವಾಗಿರುವುದರಿಂದ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಆಸೀಪ್ ಸೇಠ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

“ಪ್ರತಿಯೊಬ್ಬ ಶಾಸಕರಿಗೂ ತಮ್ಮ ಸಮುದಾಯ, ಪ್ರದೇಶ ಹಾಗೂ ರಾಜಕೀಯ ಪ್ರತಿನಿಧಿತ್ವದ ಆಧಾರದ ಮೇಲೆ ಸಚಿವ ಸ್ಥಾನ ಕೇಳುವ ಹಕ್ಕಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಿನ ಗೋಡೆ ಹಾರಿ ಮೂವರು ಕೈದಿಗಳು ಎಸ್ಕೇಪ್

ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸ್ಪಷ್ಟನೆ : ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಗೂಂಡಾಗಿರಿ ನಡೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಇದು ಗೂಂಡಾಗಿರಿ ಅಲ್ಲ, ಭೂಮಿ ಕಳೆದುಕೊಳ್ಳುವವರ ಆಕ್ರೋಶದಿಂದ ಉಂಟಾದ ಗಲಾಟೆಯಾಗಿದೆ” ಎಂದು ಸ್ಪಷ್ಟಪಡಿಸಿದರು.

ಈ ಘಟನೆಯೊಂದಿಗೆ ಮುಖ್ಯಮಂತ್ರಿ ಅವರಿಗೆ ಯಾವುದೇ ಸಂಬಂಧ ಇಲ್ಲ. ಸ್ಥಳೀಯ ಮಟ್ಟದಲ್ಲಿ ಪೊಲೀಸರು ಹಾಗೂ ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಶಾಲೆಯಲ್ಲೇ AI ಶಿಕ್ಷಣ: Google ಸಮಾವೇಶದಲ್ಲಿ CM ಮಾಸ್ಟರ್ ಪ್ಲಾನ್!

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕೆಲ ರೈತರು ಹಾಗೂ ಭೂಮಾಲೀಕರು ಸ್ವಯಂಪ್ರೇರಿತವಾಗಿ ಭೂಮಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಅಂತಹವರ ಭೂಮಿಯನ್ನು ಮಾತ್ರ ಅಧಿಕಾರಿಗಳು ಅಳತೆ ಮಾಡುತ್ತಿದ್ದಾರೆ. ಯಾರ ಮೇಲೂ ಬಲವಂತದ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಬರ ಪೀಡಿತ ತಾಲೂಕುಗಳ ಘೋಷಣೆ : ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳನ್ನು ಘೋಷಿಸುವಂತೆ ಕೇಳಿಬರುತ್ತಿರುವ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು. ಮಳೆ ಕೊರತೆ, ಬೆಳೆ ಹಾನಿ ಹಾಗೂ ಇತರೆ ಅಂಶಗಳನ್ನು ಪರಿಗಣಿಸಿ ಸರ್ಕಾರ ಪರಿಸ್ಥಿತಿಯ ಸಂಪೂರ್ಣ ಅವಲೋಕನ ನಡೆಸುತ್ತಿದೆ. ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: ರಾಜ್ಯಾದ್ಯಂತ 10 ಸಾವಿರ ಯುವ ಸಂಘ ಸ್ಥಾಪನೆ: ಪ್ರತಿ ಸಂಘಕ್ಕೆ ₹10 ಲಕ್ಷ

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆ ಸತೀಶ್ ಜಾರಕಿಹೊಳಿ ಅವರ ಈ ಹೇಳಿಕೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.