SK Home Ad
Home ಸುದ್ದಿ ರಾಜ್ಯ ಉಪಸಭಾಪತಿ ಎಂ.ಕೆ. ಪ್ರಾಣೇಶ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; ಪರಿಷತ್‌ ಸದಸ್ಯತ್ವ ರದ್ದು

ಉಪಸಭಾಪತಿ ಎಂ.ಕೆ. ಪ್ರಾಣೇಶ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; ಪರಿಷತ್‌ ಸದಸ್ಯತ್ವ ರದ್ದು

0
135

ನವದೆಹಲಿ: ಕರ್ನಾಟಕ ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ ಶಾಕ್‌ ನೀಡಿದ್ದು, ಅವರ ವಿಧಾನ ಪರಿಷತ್‌ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್‌ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಹೈಕೋರ್ಟ್‌ ತೀರ್ಪನ್ನು ಎತ್ತಿಹಿಡಿದಿದೆ.

ಈ ತೀರ್ಪಿನೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರ ವಾದಕ್ಕೆ ನ್ಯಾಯಾಲಯ ಮನ್ನಣೆ ನೀಡಿದಂತಾಗಿದೆ.

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ 2021ರ ಡಿಸೆಂಬರ್‌ನಲ್ಲಿ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಒಟ್ಟು 2,410 ಮತಗಳು ಚಲಾವಣೆಯಾಗಿದ್ದು, ಅವುಗಳಲ್ಲಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್‌ ಅವರು 1,188 ಮತಗಳನ್ನು ಪಡೆದು, ಗಾಯತ್ರಿ ಶಾಂತೇಗೌಡ ಅವರ 1,182 ಮತಗಳ ವಿರುದ್ಧ ಕೇವಲ ಆರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಆದರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸಿರುವುದು ಕಾನೂನುಬಾಹಿರ ಎಂದು ಗಾಯತ್ರಿ ಶಾಂತೇಗೌಡ ಅವರು ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‌ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ತೀರ್ಪು ನೀಡಿದ್ದು, ಆ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್‌ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್‌ ಕೂಡ ಹೈಕೋರ್ಟ್‌ ತೀರ್ಪನ್ನೇ ಎತ್ತಿಹಿಡಿದಿರುವುದರಿಂದ ಪ್ರಾಣೇಶ್‌ ಅವರ ವಿಧಾನ ಪರಿಷತ್‌ ಸದಸ್ಯತ್ವ ರದ್ದಾಗಿದೆ. ಈ ತೀರ್ಪು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ನಿಯಮಗಳ ಕುರಿತು ಮಹತ್ವದ ಸ್ಪಷ್ಟನೆ ನೀಡಿದಂತಾಗಿದೆ.