ಚಿತ್ರದುರ್ಗ: ರಾಜ್ಯದಲ್ಲಿ ನೇಮಕಾತಿ ಪರ್ವ ನಡೆಯುತ್ತಿದೆ. ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೀಟ್ ಹಗರಣ ಎಲ್ಲರ ಗಮನದಲ್ಲಿರಲಿ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಅಧಿಕಾರಿಗಳೇ ಹೊಣೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಗೂ ನಂತರ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ಪರೀಕ್ಷೆ ನಡೆಯುವ ಕಡೆ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ಪರೀಕ್ಷೆಯ, ಪ್ರಶ್ನೆ ಪತ್ರಿಕೆ ತಯಾರಿಕೆ, ಹಂಚಿಕೆ ಹೀಗೆ ಪ್ರತಿಯೊಂದು ಹಂತವೂ ದಾಖಲೆಯಾಗಬೇಕು ಎಂದರು.
“ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಬೇಕು. ಜನರು ಸರ್ಕಾರದ ಬಾಗಿಲಿಗೆ ಬರಬಾರದು. ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು. ಸುಮ್ಮನೆ ತಕರಾರು ಮಾಡಿದರೆ ಕ್ರಮ ಕೈಗೊಳ್ಳುವೆ. ನಾನು ಕೊಟ್ಟ ಸ್ವಾತಂತ್ರ್ಯ ದುರುಪಯೋಗ ಮಾಡಿಕೊಂಡರೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಸಿದರು.






















