ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ ಆಚರಿಸಲಾಗುವುದು ಎಂದು ಘೋಷಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದು, ರಾಜ್ಯದ ಜನರ ಕುಡಿಯುವ ನೀರಿನ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ರೈತರು, ಕಾರ್ಮಿಕರು, ವ್ಯಾಪಾರಿಗಳು, ಸಾರಿಗೆ ಸಂಘಟನೆಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ರಾಜ್ಯ ಬಂದ್‌ಗೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗತೊಡಗಿದೆ. ಆದರ್ಶ್ ಆಟೋ ಡ್ರೈವರ್ಸ್ ಯೂನಿಯನ್ ಆಗಸ್ಟ್ 13ರಂದು ಆಟೋ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದು, ಬಂದ್‌ಗೆ ಬೆಂಬಲ ನೀಡುವುದಾಗಿ ತಿಳಿಸಿದೆ. ಇನ್ನೂ ಹಲವು ಸಂಘಟನೆಗಳು ತಮ್ಮ ನಿಲುವನ್ನು ಪ್ರಕಟಿಸುವ ನಿರೀಕ್ಷೆಯಿದೆ.
‘ಕರ್ನಾಟಕಕ್ಕೆ ಪದೇಪದೇ ಅನ್ಯಾಯ’ : ಕನ್ನಡಪರ ಹೋರಾಟಗಾರ ಸಾರಾ ಗೋವಿಂದ್ ಮಾತನಾಡಿ, ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಪದೇಪದೇ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ನೀಡಲಾಗುತ್ತಿರುವ ತೀರ್ಪುಗಳು ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು.
‘ಕುಡಿಯುವ ನೀರಿಗೂ ಸಂಕಷ್ಟ’ : ಕರವೇ ಮುಖಂಡ ಶಿವರಾಮೇಗೌಡ ಮಾತನಾಡಿ, ಕರ್ನಾಟಕದಲ್ಲೇ ಕುಡಿಯುವ ನೀರಿನ ಅಭಾವವಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ನ್ಯಾಯಸಮ್ಮತವಲ್ಲ ಎಂದು ಪ್ರಶ್ನಿಸಿದರು. ಕಾವೇರಿ ಪ್ರಾಧಿಕಾರದ ನಿರ್ಧಾರ ರಾಜ್ಯದ ಪಾಲಿಗೆ ಅನ್ಯಾಯವಾಗಿದೆ ಎಂದು ಅವರು ಟೀಕಿಸಿದರು.
‘ಸುಗ್ರೀವಾಜ್ಞೆ ಮೂಲಕ ನೀರು ನಿಲ್ಲಿಸಿ’ : ಕರವೇ ನಾಯಕ ಪ್ರವೀಣ್ ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ ಕಾವೇರಿ ನೀರು ಬಿಡುಗಡೆ ತಡೆಯಲು ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅನುಸರಿಸಿದ್ದ ಮಾದರಿಯಲ್ಲಿ ಅಗತ್ಯವಿದ್ದರೆ ಸುಗ್ರೀವಾಜ್ಞೆ ತಂದು ನೀರು ಬಿಡುಗಡೆ ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದ ಮುಂದಿನ ಪೀಳಿಗೆಯ ಹಿತಕ್ಕಾಗಿ ನೀರಿನ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದರು.
ಕಾವೇರಿ ನೀರು ಹಂಚಿಕೆ ವಿಚಾರ ರಾಜ್ಯದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಆಗಸ್ಟ್ 13ರಂದು ಘೋಷಿಸಲಾಗಿರುವ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲದ ಹಿನ್ನೆಲೆಯಲ್ಲಿ ಅದರ ಪರಿಣಾಮ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸರ್ಕಾರದ ಮುಂದಿನ ಕ್ರಮ ಹಾಗೂ ನ್ಯಾಯಾಂಗದ ಬೆಳವಣಿಗೆಗಳತ್ತ ರಾಜ್ಯದ ಜನರ ಗಮನ ನೆಟ್ಟಿದೆ.






















