SK Home Ad
Home ನಮ್ಮ ಜಿಲ್ಲೆ ಬೆಂಗಳೂರು ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ ಪಾಟೀಲ

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ ಪಾಟೀಲ

0
133

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಬುಧವಾರ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದರಿಂದ ಬೇಸರಗೊಂಡಿದ್ದ ಪಾಟೀಲ ಅವರು, ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು.

ಸದ್ಯ ತಮ್ಮ ನಿರ್ಧಾರ ಬದಲಿಸಿಕೊಂಡಿರುವ ಪಾಟೀಲ ಅವರು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗೆ ಪತ್ರ ಬರೆದು ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

ಪತ್ರದಲ್ಲಿ, “ಆಗಸ್ಟ್ 3ರಂದು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸನ್ಮಾನ್ಯ ಸಭಾಧ್ಯಕ್ಷರಿಗೆ ಸಲ್ಲಿಸಿದ್ದೆ. ಆದರೆ ಸದರಿ ರಾಜೀನಾಮೆ ಪತ್ರವನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂಬ ಮಾಹಿತಿಯನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ” ಎಂದು ಉಲ್ಲೇಖಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರಾದ ಹಲವು ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗಿರುವ ನಡುವೆಯೇ ಯಶವಂತರಾಯಗೌಡ ಪಾಟೀಲ ಅವರ ಈ ನಿರ್ಧಾರ ಮಹತ್ವ ಪಡೆದಿದೆ.

ಕಳೆದ ಎರಡು ದಿನಗಳಿಂದ ಪಕ್ಷದ ಹಿರಿಯ ನಾಯಕರು ಹಾಗೂ ಹೈಕಮಾಂಡ್ ಮಟ್ಟದಲ್ಲಿ ನಡೆದ ಮನವೊಲಿಕೆ ಪ್ರಯತ್ನಗಳ ಬಳಿಕ ಅವರು ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.