ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ. ಮೃತರನ್ನು 18 ವರ್ಷದ ಬಾವರಸಿಂಗ್ ರಜಪೂತ್ ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿನತ್ತ ಖಾಸಗಿ ಬಸ್ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ಬಸ್‌ನಿಂದ ಹೊರತೆಗೆದಿದ್ದಾರೆ. ಬಳಿಕ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಹಾಗೂ ಅವರ ಗಾಯಗಳ ತೀವ್ರತೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದರು.






















