SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬೀಗ ಮುರಿದು 52 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಬೀಗ ಮುರಿದು 52 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

0
40

ದಾವಣಗೆರ (ಜಗಳೂರು): ಬೀಗ ಹಾಕಿದ್ದ ಮನೆಯೊಂದರ ಬೀಗ ಮುರಿದು ಸುಮಾರು 52 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು ಹಾಗೂ ನಗದನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ತಾಲೂಕಿನ ದೇವಿಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ದೇವಿಕೆರೆ ಗ್ರಾಮದ ಕವಿತಾ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಕವಿತಾ ಅವರು ತಮ್ಮ ಮಗನ ವೈದ್ಯಕೀಯ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ದಾವಣಗೆರೆಯ ಆಸ್ಪತ್ರೆಯಲ್ಲಿದ್ದರು. ಮಗನ ಆರೈಕೆ ಮುಗಿಸಿ ಸೋಮವಾರ ಮನೆಗೆ ಮರಳಿದಾಗ ಮನೆಯ ಮುಂಭಾಗದ ಬೀಗ ಮುರಿದಿರುವುದು ಕಂಡುಬಂದಿದೆ.

ಆತಂಕಗೊಂಡು ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಮನೆಯಲ್ಲಿದ್ದ ಸುಮಾರು 410 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ಸಾಮಗ್ರಿಗಳು ಹಾಗೂ 4 ಲಕ್ಷ ರೂ. ನಗದನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಕಳವಾಗಿರುವ ಚಿನ್ನಾಭರಣ, ಬೆಳ್ಳಿ ಹಾಗೂ ನಗದಿನ ಒಟ್ಟು ಮೌಲ್ಯ ಸುಮಾರು 52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಬಿಳಿಚೋಡು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ಹಾಗೂ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್. ಬಸವರಾಜ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಳ್ಳರ ಸುಳಿವು ಪತ್ತೆಹಚ್ಚಲು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ಈ ಕುರಿತು ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.