SK Home Ad
Home ಸುದ್ದಿ ರಾಜ್ಯ ‘AI ಅಕ್ಷರ ಅಭಿಯಾನ’, ‘ಕೋಡಿಂಗ್ ಗುರುಕುಲ’ ಘೋಷಿಸಿದ ಡಿಕೆಶಿ

‘AI ಅಕ್ಷರ ಅಭಿಯಾನ’, ‘ಕೋಡಿಂಗ್ ಗುರುಕುಲ’ ಘೋಷಿಸಿದ ಡಿಕೆಶಿ

0
62

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ – ಜನವರಿ 2027ರಿಂದ ಕೋರ್ಸ್‌ಗಳು : ಯುವಕರಿಗೆ AI, ಕೋಡಿಂಗ್‌ ಕೌಶಲ್ಯ – 10,000 ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಯುವಜನರನ್ನು ಜಾಗತಿಕ ಮಟ್ಟದ ಸ್ಪರ್ಧೆಗೆ ಸಜ್ಜುಗೊಳಿಸುವ ಉದ್ದೇಶದಿಂದ ಕರ್ನಾಟಕದ ಎಲ್ಲ ಶಾಲೆಗಳಲ್ಲಿ 6ನೇ ತರಗತಿಯಿಂದಲೇ AI ಶಿಕ್ಷಣವನ್ನು ಪರಿಚಯಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಯುವಜನರ ಕಾಲವನ್ನು ‘ನವ ಯುಗ’ ಎಂದು ಬಣ್ಣಿಸಿದರು. ಜಾಗತಿಕ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಆಧಾರಿತ ಹಲವು ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ‘AI ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಎಂಬ ಎರಡು ಪ್ರಮುಖ ಕಾರ್ಯಕ್ರಮಗಳನ್ನು ಘೋಷಿಸಿದರು. ‘ಕೋಡಿಂಗ್ ಗುರುಕುಲ’ದಡಿ ಉಚಿತ ವಿಶೇಷ ತರಗತಿಗಳನ್ನು ಆರಂಭಿಸಿ, ಪ್ರತಿ ವಿದ್ಯಾರ್ಥಿಗೂ AI ಮತ್ತು ಕೋಡಿಂಗ್ ಕೌಶಲ್ಯ ಕಲಿಯುವ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಇದರ ಜೊತೆಗೆ ಬೆಂಗಳೂರಿನಲ್ಲಿ ದೇಶದ ಪ್ರಪ್ರಥಮ ಸರ್ಕಾರಿ ಸ್ವಾಮ್ಯದ AI ವಿಶ್ವವಿದ್ಯಾಲಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. 2027ರ ಜನವರಿ ವೇಳೆಗೆ AI ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ AI ಹಬ್‌ಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಮತ್ತಷ್ಟು ಉತ್ತೇಜನ ನೀಡಲಾಗುವುದು ಎಂದರು.

1,000 ಸರ್ಕಾರಿ ಶಾಲೆಗಳಿಗೆ ಹೊಸ ರೂಪ : ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ಅವರು ಹೇಳಿದರು. ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಆಧುನಿಕ ಮೂಲಸೌಕರ್ಯ, ದ್ವಿಭಾಷಾ ಶಿಕ್ಷಣ, ಡಿಜಿಟಲ್ ತರಗತಿಗಳು, ವೃತ್ತಿ ಶಿಕ್ಷಣ ಹಾಗೂ ವಿದ್ಯಾರ್ಥಿ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು.

ಈ ಯೋಜನೆಯಿಂದ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪರ್ಯಾಯವಾಗುವ ರೀತಿಯಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಲಾಗಿದ್ದು, ಇದುವರೆಗೆ 6 ಲಕ್ಷಕ್ಕೂ ಹೆಚ್ಚು ಉಚಿತ ಬಸ್ ಪಾಸ್‌ಗಳನ್ನು ವಿತರಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ದೂರದ ಪ್ರದೇಶಗಳಿಂದ ಪ್ರಯಾಣಿಸಬೇಕಾದ ಸಂದರ್ಭದಲ್ಲಿ ಸಾರಿಗೆ ವೆಚ್ಚವು ಅಡ್ಡಿಯಾಗದಂತೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

10 ಸಾವಿರ ಭಾರತ್ ಜೋಡೋ ಯುವ ಸಂಘ : ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಯನ್ನು ಕಾಪಾಡುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ಯುವಕರಲ್ಲಿ ಹೊಸ ಆಲೋಚನೆ, ನಾಯಕತ್ವ ಗುಣ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಈ ಯುವ ಸಂಘಗಳು ನಾಡಿನ ಸೌಹಾರ್ದತೆ, ಸಂವಿಧಾನದ ಮೌಲ್ಯಗಳು, ಕ್ರೀಡೆ ಹಾಗೂ ಕರ್ನಾಟಕದ ಸಂಸ್ಕೃತಿಯ ಹಿರಿಮೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಲಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಯುವ ನಾಯಕತ್ವ ಮತ್ತು ಸಾಂಸ್ಕೃತಿಕ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ ಎಂದು ಹೇಳಿದರು.

ಪ್ರತಿ ಸಂಘಕ್ಕೆ ₹10 ಲಕ್ಷದಂತೆ ಅನುದಾನ ಒದಗಿಸಲಾಗಿದ್ದು, ಇದಕ್ಕಾಗಿ ವಾರ್ಷಿಕವಾಗಿ ₹1,000 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಯುವನಿಧಿಯಿಂದ 3.72 ಲಕ್ಷ ಮಂದಿಗೆ ನೆರವು : ರಾಜ್ಯದ ನಿರುದ್ಯೋಗಿ ಯುವಜನರಿಗೆ ನೆರವಾಗುವ ಯುವನಿಧಿ ಯೋಜನೆಯಡಿ 3.72 ಲಕ್ಷ ನಿರುದ್ಯೋಗಿ ಮತ್ತು ಡಿಪ್ಲೊಮಾ ಪದವೀಧರರಿಗೆ ₹1,154 ಕೋಟಿ ನೆರವು ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಮಾಹಿತಿ ನೀಡಿದರು.

ಯುವಜನರಿಗೆ ಆರ್ಥಿಕ ನೆರವಿನ ಜೊತೆಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಹೇಳಿದರು.

AI ಶಿಕ್ಷಣ, ಕೋಡಿಂಗ್ ತರಬೇತಿ, ಸರ್ಕಾರಿ AI ವಿಶ್ವವಿದ್ಯಾಲಯ, AI ಹಬ್‌ಗಳು, ಕರ್ನಾಟಕ ಪಬ್ಲಿಕ್ ಶಾಲೆಗಳ ವಿಸ್ತರಣೆ, ಉಚಿತ ವಿದ್ಯಾರ್ಥಿ ಸಾರಿಗೆ ಮತ್ತು ಯುವ ನಾಯಕತ್ವ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಯನ್ನು ಹೊಸ ತಂತ್ರಜ್ಞಾನ ಹಾಗೂ ಜಾಗತಿಕ ಸ್ಪರ್ಧೆಗೆ ಸಜ್ಜುಗೊಳಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

“ಇದು ನಿಮ್ಮ ಯುಗ, ನವ ಯುಗ” ಎಂಬ ಸಂದೇಶದೊಂದಿಗೆ ಯುವಜನರ ಸಾಮರ್ಥ್ಯವನ್ನು ಬಳಸಿಕೊಂಡು ಕರ್ನಾಟಕವನ್ನು ತಂತ್ರಜ್ಞಾನ ಮತ್ತು ಕೌಶಲ್ಯ ಕ್ಷೇತ್ರದಲ್ಲಿ ಮುಂಚೂಣಿಗೆ ತರಲು ಸರ್ಕಾರ ಮುಂದಾಗಿದೆ ಎಂಬುದನ್ನು ಅವರು ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಒತ್ತಿ ಹೇಳಿದರು.