SK Home Ad
Home ನಮ್ಮ ಜಿಲ್ಲೆ ಯಾದಗಿರಿ ವಿದ್ಯುತ್‌ ಕಂಬಕ್ಕೆ ಬೊಲೆರೊ ಡಿಕ್ಕಿ: ಮೂವರು ಕೂಲಿ ಕಾರ್ಮಿಕರು ಸಾವು

ವಿದ್ಯುತ್‌ ಕಂಬಕ್ಕೆ ಬೊಲೆರೊ ಡಿಕ್ಕಿ: ಮೂವರು ಕೂಲಿ ಕಾರ್ಮಿಕರು ಸಾವು

0
85

ಯಾದಗಿರಿ: ಕೂಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್‌ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತಷ್ಟು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಡ್ನಾಳ್‌ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ಕಾರ್ಮಿಕರು ತೆರಳಿದ್ದರು. ಕೆಲಸ ಮುಗಿಸಿಕೊಂಡು ಬೊಲೆರೊ ವಾಹನದಲ್ಲಿ ಮನೆಗೆ ವಾಪಸ್‌ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಬದಿಯ ವಿದ್ಯುತ್‌ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೀ.ಗುಡಿ ಪೊಲೀಸ್‌ ಠಾಣೆಯ ಪಿಎಸ್‌ಐ ದೇವಿಂದ್ರ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಸ್ಥಳೀಯರು ಹಾಗೂ ಪೊಲೀಸರು ನಡೆಸಿದ್ದಾರೆ.

ಘಟನೆಯಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಭೀ.ಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.