ವಿಜಯಪುರ: ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರ ಶವಗಳು ಕೆರೆಯಲ್ಲಿ ಪತ್ತೆಯಾಗಿದ್ದು, ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಮೃತರನ್ನು ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (10), ವಿಕಾಸ (5) ಹಾಗೂ ಸಾನಿಕಾ (7) ಎಂದು ಗುರುತಿಸಲಾಗಿದೆ.
ಕಳೆದ ಆ. 23ರಂದು ಶೋಭಾ ಅವರು ಪತಿ ಮಲಕಾರಿ ಅವರೊಂದಿಗೆ ಜಗಳವಾಡಿದ್ದರು ಎನ್ನಲಾಗಿದೆ. ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯಿಂದ ಹೊರಗೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಆ. 24ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು ಬೆಳಗ್ಗೆ ಭೂತನಾಳ ಕೆರೆಯ ಬಳಿ ವಾಯುವಿಹಾರಕ್ಕೆ ಬಂದಿದ್ದ ಸಂತೋಷ ಎಂಬುವವರು ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






















