ಬೆಂಗಳೂರು: ಸೈಬರ್ ಕ್ರೈಂ ಪ್ರಕರಣವೊಂದರ ಹೆಚ್ಚಿನ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕರ್ತವ್ಯದ ನಿಮಿತ್ತ ತೆರಳಿದ್ದ ವೇಳೆ ಸಂಭವಿಸಿದ ಈ ದುರಂತ ಬೆಂಗಳೂರು ಪೊಲೀಸ್ ಇಲಾಖೆಗೆ ಆಘಾತವನ್ನುಂಟು ಮಾಡಿದೆ.
ಸೈಬರ್ ಎಪಿಕೆ ಫೈಲ್ ಫ್ರಾಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆಯ ಒಟ್ಟು ಒಂಬತ್ತು ಮಂದಿ ಪೊಲೀಸರ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು. ತನಿಖೆಯ ಭಾಗವಾಗಿ ಆರೋಪಿಗಳ ಪತ್ತೆ ಹಾಗೂ ವಶಕ್ಕೆ ಪಡೆಯುವ ಕಾರ್ಯಾಚರಣೆ ನಡೆಸಲಾಗಿತ್ತು.
ತನಿಖೆ ಮುಗಿಸಿ ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ತಂಡ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಸೇರಿದಂತೆ ಕೆಲವರು ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಪ್ರಕರಣದ ತನಿಖೆ ಹಾಗೂ ಆರೋಪಿಗಳ ಪತ್ತೆ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಇಬ್ಬರು ಆರೋಪಿಗಳ ಬಂಧನದ ಬಳಿಕ ಆರು ಸಿಬ್ಬಂದಿ ವಾಪಸ್ : ಸೈಬರ್ ಕ್ರೈಂ ಪ್ರಕರಣದ ತನಿಖೆಗಾಗಿ ತೆರಳಿದ್ದ ತಂಡವು ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿತ್ತು. ಬಳಿಕ ಆರು ಮಂದಿ ಪೊಲೀಸ್ ಸಿಬ್ಬಂದಿ ಆರೋಪಿಗಳೊಂದಿಗೆ ಬೆಂಗಳೂರಿಗೆ ವಾಪಸಾಗಿದ್ದರು.
ಆದರೆ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳ ಪತ್ತೆ ಬಾಕಿ ಇದ್ದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಸೇರಿದಂತೆ ಮೂವರು ಸಿಬ್ಬಂದಿ ಮಧ್ಯಪ್ರದೇಶದಲ್ಲೇ ಉಳಿದುಕೊಂಡು ತನಿಖೆ ಮುಂದುವರಿಸಿದ್ದರು. ಇದೇ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
2005ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆ : ಮೃತ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರು 2005ರ ಬ್ಯಾಚ್‌ನಲ್ಲಿ ಕಾನ್‌ಸ್ಟೆಬಲ್ ಆಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಬಳಿಕ 2007ರಲ್ಲಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿ ಸೇವೆ ಮುಂದುವರಿಸಿದ್ದರು. ತಮ್ಮ ಪೊಲೀಸ್ ಸೇವಾವಧಿಯಲ್ಲಿ ಬೆಂಗಳೂರಿನ ಅಶೋಕನಗರ, ಇಂದಿರಾನಗರ ಹಾಗೂ ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ : ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರು ಕರ್ತವ್ಯದ ನಡುವೆಯೇ ದುರಂತ ಸಾವಿಗೀಡಾದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಹೇಳಿದ್ದಾರೆ.
ಕರ್ತವ್ಯನಿಷ್ಠ ಅಧಿಕಾರಿಯನ್ನು ಕಳೆದುಕೊಂಡ ಅವರ ಕುಟುಂಬ ಹಾಗೂ ಪೊಲೀಸ್ ಇಲಾಖೆಯ ದುಃಖದಲ್ಲಿ ತಾನೂ ಭಾಗಿಯಾಗಿರುವುದಾಗಿ ತಿಳಿಸಿರುವ ಡಿ.ಕೆ. ಶಿವಕುಮಾರ್, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಈ ನಡುವೆ ಅಪಘಾತದ ಕುರಿತು ಬೆಂಗಳೂರು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಅಪಘಾತದ ನಿಖರ ಕಾರಣ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ತನಿಖೆಯ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.
- ನಮಗೆ ನ್ಯಾಯ ಯಾವಾಗ?: ಸಚಿವರ ರಾಜೀನಾಮೆ ನಡುವೆ ಚಂದ್ರಶೇಖರ್ ಪತ್ನಿಯ ಪ್ರಶ್ನೆ
- ಬೆಂಗಳೂರು ಹೊರತುಪಡಿಸಿ ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಿ
- ಕೊನೆಗೂ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ
- ಹುಬ್ಬಳ್ಳಿಯಲ್ಲಿ ಮತ್ತೆ ಮರ್ಡರ್: ಹಾಡಹಗಲೇ ವ್ಯಕ್ತಿಯನ್ನು ಕೊಚ್ಚಿ ಮೂವರು ಪರಾರಿ
- ತನಿಖೆಗೆ ತೆರಳಿದ್ದ ಬೆಂಗಳೂರು ಪೊಲೀಸ್ ಮಧ್ಯಪ್ರದೇಶದಲ್ಲಿ ದುರ್ಮರಣ!




















