ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಯಂದಿರಿಗೆ ಬಾಗೀನ ಸಮರ್ಪಣೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಮಂಡ್ಯ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ಪ್ರಸ್ತುತ ರಾಜ್ಯದಲ್ಲಿ ಸಣ್ಣ ರಸ್ತೆ ರಿಪೇರಿ ಕಾರ್ಯಗಳಿಗೂ ಅನುದಾನವಿಲ್ಲದೆ ಅಭಿವೃದ್ಧಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ. ಕಾವೇರಿ ನೀರಿನ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದು, ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುವುದು ನೋಡಿ ಕಣ್ಣಲ್ಲಿ ನೀರು ಬರುತ್ತದೆ ಎಂದು ಆರೋಪಿಸಿದರು.
ನಾರಿಯರ ಗೌರವ ಮತ್ತು ಭದ್ರತೆ: ಕೇವಲ ಗ್ಯಾರಂಟಿ ಯೋಜನೆಯಡಿ ಹಣ ನೀಡುವುದು ಮುಖ್ಯವಲ್ಲ, ರಾಜ್ಯದಲ್ಲಿ ಮಹಿಳೆಯರ ಭದ್ರತೆ ಮತ್ತು ಗೌರವವನ್ನು ಕಾಪಾಡುವುದು ಅತ್ಯಗತ್ಯ. ಪ್ರಸ್ತುತ ಭ್ರಷ್ಟಾಚಾರ ಹೆಚ್ಚಾಗಿದ್ದು, ಪೊಲಿಸ್ ಸ್ಟೇಷನ್‌ಗಳು ಹರಾಜ್ ಆಗುತ್ತಿವೆ. ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಹರಿದಾಯ್ದರು.
ಸಚ್ಚಿದಾನಂದ ಅವರಿಗೆ ಬೆಂಬಲ: ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಅಂತರದಲ್ಲಿ ಹಿನ್ನಡೆಯಾಗಿದ್ದರೂ, ಸಚ್ಚಿದಾನಂದ ಅವರು ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದಾರೆ. ತಾವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಮುಂಬರುವ ದಿನಗಳಲ್ಲಿ ಅವರಿಗೆ ಜನತೆ ಆಶೀರ್ವಾದ ಮಾಡಬೇಕು ಎಂದು ಕೋರಿದರು.
ಮಂಡ್ಯ ಜಿಲ್ಲೆ ಮತ್ತು ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತರಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವರಾದ ನಾರಾಯಣಗೌಡ, ಸತೀಶ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






















