SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬರ ಪಟ್ಟಿಯಿಂದ ಜಗಳೂರು ಹೊರಕ್ಕೆ, ಮರುಪರಿಶೀಲನೆಗೆ ಮನವಿ: ಸಚಿವ ಬಸವಂತಪ್ಪ

ಬರ ಪಟ್ಟಿಯಿಂದ ಜಗಳೂರು ಹೊರಕ್ಕೆ, ಮರುಪರಿಶೀಲನೆಗೆ ಮನವಿ: ಸಚಿವ ಬಸವಂತಪ್ಪ

0
56

ದಾವಣಗೆರೆ: ಜಿಲ್ಲೆಯ ಆರು ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯಾಗಿದ್ದರೂ ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಜಗಳೂರು ತಾಲೂಕು ಹೆಸರು ಕೈಬಿಟ್ಟಿರುವುದು ಅಥವಾ ಪರಿಷ್ಕೃತ ಪಟ್ಟಿಯಲ್ಲಿ ಲೋಪದೋಷಗಳಿದ್ದರೆ, ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ಮರುಪರಿಶೀಲನೆಗೆ ಮನವಿ ಮಾಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ಪಟ್ಟಿಯಿಂದ ತಾಲೂಕು ಹೊರಗುಳಿದಿರುವ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ಜಿಲ್ಲೆಯ ನೈಜ ಬರ ಪರಿಸ್ಥಿತಿಯನ್ನು ಅಧಿಕಾರಿಗಳ ಮೂಲಕ ಸಮರ್ಪಕವಾಗಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ವರದಿ ನೀಡಿಲ್ಲ ಎಂಬ ಜಗಳೂರು ಶಾಸಕರ ಆಕ್ರೋಶದ ಕುರಿತು ಪ್ರತಿಕ್ರಿಯಿಸಿದ ಬಸವಂತಪ್ಪ, ಜಗಳೂರು ಶಾಸಕರೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿ ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗುವುದು ಎಂದರು.

ರೈತರಿಗೆ ಆಗಿರುವ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದಿಂದ ಅಗತ್ಯ ಪರಿಹಾರ ಹಾಗೂ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಬಸವಂತಪ್ಪ, ಅವರ ವಿರುದ್ಧ ಯಾವುದೇ ಚಾರ್ಜ್‌ಶೀಟ್ ಇಲ್ಲದಿದ್ದರೂ ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದು ಅವರು ರಾಜೀನಾಮೆ ನೀಡಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಬಿ. ನಾಗೇಂದ್ರ ಅವರು ನಿರ್ದೋಷಿ ಎಂಬುದು ಸಾಬೀತಾಗಲಿದೆ. ತನಿಖೆ ಹಾಗೂ ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಸಮರ್ಥಿಸಿಕೊಂಡರು.

ಒಳಮೀಸಲಾತಿ ಕುರಿತು ಉಂಟಾಗಿರುವ ಗೊಂದಲವನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಸಂಬಂಧ ಎಲ್ಲ ಸಮುದಾಯಗಳ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಚರ್ಚೆ ನಡೆಸಲಾಗುವುದು.

ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಲೋಪದೋಷಗಳನ್ನು ಸರಿಪಡಿಸಿ, ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ದೊರೆಯುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಬಸವಂತಪ್ಪ ಸ್ಪಷ್ಟಪಡಿಸಿದರು.