SK Home Ad
Home ನಮ್ಮ ಜಿಲ್ಲೆ ವಿಜಯನಗರ ಬರದ ಬಿಸಿಗೆ ಕಂಗಾಲಾದ ರೈತರು: ಕೂಡ್ಲಿಗಿ ಬಂದ್‌ಗೆ ಭರ್ಜರಿ ಬೆಂಬಲ

ಬರದ ಬಿಸಿಗೆ ಕಂಗಾಲಾದ ರೈತರು: ಕೂಡ್ಲಿಗಿ ಬಂದ್‌ಗೆ ಭರ್ಜರಿ ಬೆಂಬಲ

0
41

ಹೊಸಪೇಟೆ: ಬರಪೀಡಿತ ತಾಲೂಕುಗಳ ಪಟ್ಟಿಗೆ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕುಗಳನ್ನು ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ರೈತ ಸಂಘ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಕರೆ ನೀಡಿದ್ದ ಕೂಡ್ಲಿಗಿ ಬಂದ್‌ಗೆ ಪಟ್ಟಣದ ಜನರಿಂದ ಸ್ವಯಂಪ್ರೇರಿತ ಬೆಂಬಲ ವ್ಯಕ್ತವಾಯಿತು.

ಬರದ ತೀವ್ರತೆಯಿಂದ ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಪಟ್ಟಣದ ಅಂಗಡಿ-ಮುಂಗಟ್ಟುಗಳು, ಆಟೋ ಹಾಗೂ ಸಾರಿಗೆ ಸಂಚಾರ ಬಹುತೇಕ ಸ್ಥಗಿತಗೊಂಡಿತ್ತು. ವ್ಯಾಪಾರಸ್ಥರು ಕೂಡ ಬಂದ್‌ಗೆ ಬೆಂಬಲ ಸೂಚಿಸಿದರು.

ಗಾಂಧೀಜಿ ಅವರ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಮದಕರಿ ವೃತ್ತದಲ್ಲಿ ಸಭೆ ಸೇರಿ ಬಹಿರಂಗ ಮುಷ್ಕರ ನಡೆಸಿದರು.

ಬರಪೀಡಿತ ಪಟ್ಟಿಗೆ ಕೂಡ್ಲಿಗಿ-ಕೊಟ್ಟೂರು ತಾಲೂಕುಗಳನ್ನು ಸೇರಿಸುವುದು ಸೇರಿದಂತೆ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.