ದಾವಣಗೆರೆ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಮೂರು ಟಿಎಂಸಿ ಅಡಿ ನೀರು ಹರಿಸುವುದು ಹಾಗೂ ಗುಟ್ಕಾ ನಿಷೇಧವನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಕರೆ ನೀಡಿದ್ದ ದಾವಣಗೆರೆ ಬಂದ್‌ಗೆ ಮಂಗಳವಾರ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಂದ್ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲಾ-ಕಾಲೇಜುಗಳು ರಜೆ ಘೋಷಿಸಿದ್ದರಿಂದ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳ ಸಂಚಾರ ಕಡಿಮೆಯಾಗಿತ್ತು. ನಗರ ಸಾರಿಗೆ ಬಸ್‌ಗಳು ಹಾಗೂ ಆಟೋಗಳ ಸಂಚಾರವೂ ವಿರಳವಾಗಿತ್ತು. ಇದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಯಿತು. ನಗರದಿಂದ ಹೊರಭಾಗಕ್ಕೆ ಪ್ರಯಾಣಿಸುವವರು ಪ್ಯಾಸೆಂಜರ್ ಆಟೋಗಳ ಮೊರೆ ಹೋಗಿರುವುದು ಕಂಡುಬಂತು.
ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಬಸವರಾಜ ನಾಯ್ಕ್ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲು ಮುಂದಾದರು. ಪೊಲೀಸರು ಮಧ್ಯಪ್ರವೇಶಿಸಿ ಬೆಂಕಿ ನಂದಿಸಿ ಪರಿಸ್ಥಿತಿ ನಿಯಂತ್ರಿಸಿದರು.
ವಿದ್ಯಾನಗರ, ಪಿ.ಜೆ. ಬಡಾವಣೆಯ ಚೇತನಾ ಹೋಟೆಲ್ ಬಳಿ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿಯೂ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಜೆ ಬಗ್ಗೆ ಗೊಂದಲ: ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಕುರಿತು ಬೆಳಗ್ಗೆಯಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ರಜೆಗೆ ಸಂಬಂಧಿಸಿದ ಅಧಿಕೃತ ಆದೇಶ ಸ್ಪಷ್ಟವಾಗಿ ಲಭ್ಯವಾಗುವ ಮುನ್ನವೇ ದೃಶ್ಯ ಮಾಧ್ಯಮಗಳಲ್ಲಿ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತೆರಳದೆ ಮನೆಯಲ್ಲೇ ಉಳಿದರು.
ಇನ್ನೊಂದೆಡೆ ರಜೆ ಕುರಿತು ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ತಿಳಿದುಕೊಂಡಿದ್ದ ಕೆಲ ವಿದ್ಯಾರ್ಥಿಗಳು ಎಂದಿನಂತೆ ಶಾಲಾ-ಕಾಲೇಜುಗಳಿಗೆ ತೆರಳುತ್ತಿರುವುದು ಕಂಡುಬಂತು. ಬಸ್‌ಗಳ ಸಂಚಾರ ವಿರಳವಾಗಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ತೊಂದರೆ ಅನುಭವಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್: ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದ ಪ್ರಮುಖ ವೃತ್ತಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಪ್ರಮುಖ ರಸ್ತೆಗಳ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರತಿಭಟನಾಕಾರರ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.




















