ಧಾರವಾಡದಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
ಧಾರವಾಡ: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಘಟನೆ ಕುರಿತು ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತರನ್ನು ದಾವಣಗೆರೆ ಮೂಲದ ವಿನಾಯಕ ಕೆ.ಯು. (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಧಾರವಾಡ ಯಲಿಗಾರ ಓಣಿಯ ಬಸನಗೌಡ ಯಲ್ಲಪ್ಪಗೌಡ ಪಾಟೀಲ್ (26), ದಾವಣಗೆರೆಯ ಅಭಿಷೇಕ್ ಕೆ.ಆರ್. (30) ಮತ್ತು ಅಜಯ್ (26) ಎಂದು ಗುರುತಿಸಲಾಗಿದೆ.
ತಿಳಿದು ಬಂದ ಮಾಹಿತಿಯಂತೆ, ಕಾರು ಬೆಳಗಾವಿ ಕಡೆಯಿಂದ ಧಾರವಾಡದತ್ತ ಬರುತ್ತಿದ್ದಾಗ ಮುಂದಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ತಕ್ಷಣ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ವಾಹನದ ಚಲನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















