SK Home Ad
Home ಸುದ್ದಿ ದೇಶ ಭೀಕರ ಅಪಘಾತ: ತಮಿಳುನಾಡಿನ ವಿದ್ಯಾರ್ಥಿಗಳಿಗೆ ಕೇರಳದಲ್ಲಿ ದುರಂತ ಅಂತ್ಯ – 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ: ತಮಿಳುನಾಡಿನ ವಿದ್ಯಾರ್ಥಿಗಳಿಗೆ ಕೇರಳದಲ್ಲಿ ದುರಂತ ಅಂತ್ಯ – 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

0
171

ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ದಿಂಡಿಗಲ್‌ನ ಎಂಜಿನಿಯರಿಂಗ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕೈಪಮಂಗಲಂನ ಪಣಂಬಿಕ್ಕುನ್ನು ಸೆಂಟರ್ ಬಳಿ ರಾತ್ರಿ ಸುಮಾರು 11.40ಕ್ಕೆ ಅಪಘಾತ ಸಂಭವಿಸಿದೆ.

ತಮಿಳುನಾಡು ನೋಂದಣಿಯ ಕಾರು ಗುರುವಾಯೂರಿನಿಂದ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಸರಕು ಸಾಗಣೆ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಕಾರಿನ ಭಾಗಗಳನ್ನು ಕತ್ತರಿಸಬೇಕಾಯಿತು.

ಅಪಘಾತದ ಸದ್ದು ಕೇಳಿದ ಬಳಿಕ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪಿ ಹಲವು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಬಳಿಕ ತ್ರಿಶೂರ್ ಮೆಡಿಕಲ್ ಕಾಲೇಜಿನ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಪ್ರಾಥಮಿಕ ಮಾಹಿತಿಯಂತೆ ಮೃತರಲ್ಲಿ ಕೆಲವರನ್ನು ವಿಶ್ವ, ಸಂತೋಷ್, ಪ್ರಸನ್ನ, ಮುರಳೀಕೃಷ್ಣನ್, ಸೂರ್ಯ, ಯುವಸಂಜಿತ್ ಮತ್ತು ಜೋಶುವಾ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ. ಕಾಲೇಜಿನ ಗುರುತಿನ ಚೀಟಿಗಳು ಸೇರಿದಂತೆ ಲಭ್ಯ ದಾಖಲೆಗಳ ಆಧಾರದ ಮೇಲೆ ಮೃತರ ಗುರುತು ಪತ್ತೆಹಚ್ಚಲಾಗಿದೆ.

ಅಪಘಾತದ ಕಾರಣದ ಬಗ್ಗೆ ತನಿಖೆ : ಅಪಘಾತ ಸಂಭವಿಸಿದ ರಾಷ್ಟ್ರೀಯ ಹೆದ್ದಾರಿ-66ರ ಈ ಭಾಗದಲ್ಲಿ ರಸ್ತೆ ನಿರ್ಮಾಣ ಹಾಗೂ ವಿಸ್ತರಣಾ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆಗಳನ್ನು ಮಾಡಲಾಗಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಸರಕು ಲಾರಿಗಳು ನಿಂತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಯಾವ ರೀತಿಯಲ್ಲಿ ನಿಲ್ಲಿಸಲಾಗಿತ್ತು, ರಸ್ತೆ ಮೇಲಿನ ಮಾರ್ಗಸೂಚಿಗಳು ಹಾಗೂ ಇತರ ಸುರಕ್ಷತಾ ವ್ಯವಸ್ಥೆಗಳ ಕುರಿತು ತನಿಖೆ ನಡೆಯುತ್ತಿದೆ.

ಕಾರಿನ ವೇಗವೂ ಅಪಘಾತಕ್ಕೆ ಕಾರಣವಾಗಿರಬಹುದೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತಕ್ಕೂ ಮುನ್ನ ಕಾರಿನ ಚಲನವಲನ ಹೇಗಿತ್ತು ಎಂಬುದನ್ನು ಪತ್ತೆಹಚ್ಚಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.