SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಶಿಕ್ಷಕರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡಕ್ಕೆ 3ನೇ ಸ್ಥಾನ: ಲಕ್ಷ್ಮಣ ಸವದಿ

ಶಿಕ್ಷಕರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡಕ್ಕೆ 3ನೇ ಸ್ಥಾನ: ಲಕ್ಷ್ಮಣ ಸವದಿ

0
57

ದಾಂಡೇಲಿ (ಉತ್ತರ ಕನ್ನಡ) ಸಂ. ಕ. ಸಮಾಚಾರ : ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಉತ್ತರ ಕನ್ನಡ ಜಿಲ್ಲೆ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಶನಿವಾರ, ಅಂಕೋಲಾದ ನಾಡವರ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತರ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತಿ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಶಾಲೆಗಳ ಗುಣಮಟ್ಟ ಮತ್ತು ಶಿಕ್ಷಕರ ಸೇವೆಯನ್ನು ಪ್ರಶಂಸಿದ ಸಚಿವರು ‘ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದಿದ್ದಾರೆ. ದೇಶ ಕಟ್ಟುವಲ್ಲಿ ಸರಕಾರಿ ಶಾಲೆಗಳ ಶಿಕ್ಷಕರ ಕೊಡುಗೆ ದೊಡ್ಡದು’ ಎಂದು ಹೇಳಿದರು.

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವುದು, ಸರಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಸುಮಾರು ರೂ.2 ಕೋಟಿ ವೆಚ್ಚದಲ್ಲಿ ಆಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು ಎಂದು ಸಚಿವರು ಘೋಷಿಸಿದರು.

ಈ ಯೋಜನೆಗೆ ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ನಿಧಿಯಿಂದ ₹1 ಕೋಟಿ ಹಾಗೂ ಉಳಿದ ಮೊತ್ತವನ್ನು ಶಾಸಕರ ಅನುದಾನದ ಮೂಲಕ ಒದಗಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಿಕ್ಷಕರು ಯಾವುದೇ ಅಡಚಣೆಗಳಿಗೆ ಜಗ್ಗದೆ ಸಮಾಜ ನಿರ್ಮಾಣದ ತಮ್ಮ ಜವಾಬ್ದಾರಿಯನ್ನು ನಿರಂತರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ, ಜಿ. ಪಂ. ಸಿಇಓ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಎಂ. ಎನ್., ಡಿಡಿಪಿಐ ಲತಾ ನಾಯಕ ಇದ್ದರು.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.