ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಹಣ ವರ್ಗಾವಣೆ ಆರೋಪಗಳ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ED ಮೂಲಗಳು ತಿಳಿಸಿವೆ. ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ನಿವಾಸ, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಹಾಗೂ ಸರ್ಕಾರಿ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಎರಡು ಪ್ರತ್ಯೇಕ ವಾಹನಗಳಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ED ಅಧಿಕಾರಿಗಳ ತಂಡ ಮನೆಯೊಳಗೆ ಪ್ರವೇಶಿಸಿ ಶೋಧ ಆರಂಭಿಸಿದೆ. ಆಸ್ತಿ ದಾಖಲೆಗಳು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಬ್ಯಾಂಕ್ ಖಾತೆಗಳ ವಿವರ ಸೇರಿದಂತೆ ವಿವಿಧ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಅಬಕಾರಿ ಇಲಾಖೆಯ ಅಕ್ರಮ ಪ್ರಕರಣದ ತನಿಖೆ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ED ತನಿಖೆ ನಡೆಸುತ್ತಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಸುಮಾರು 18 ಅನಧಿಕೃತ ಲೈಸೆನ್ಸ್‌ಗಳನ್ನು ನೀಡುವ ಪ್ರಕ್ರಿಯೆಗೆ ಸಂಬಂಧಿಸಿದ ಆರೋಪಗಳೂ ಕೇಳಿಬಂದಿವೆ.
ಈ ಹಿಂದೆ ಜೂನ್ 24ರಂದು ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ED ಅಧಿಕಾರಿಗಳು ದಾಳಿ ನಡೆಸಿದ್ದರು. ವೈ. ಮಂಜುನಾಥ್ ಅವರು ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಎಂಬ ಹಿನ್ನೆಲೆಯಲ್ಲಿ ಇಂದಿನ ಶೋಧ ಕಾರ್ಯಾಚರಣೆಯೂ ಪ್ರಕರಣದಲ್ಲಿ ಮಹತ್ವ ಪಡೆದಿದೆ.





















