ಬಳ್ಳಾರಿ: ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಸೆಪ್ಟೆಂಬರ್ 10ರಂದು ಬೃಹತ್ ಪಾದಯಾತ್ರೆಯ ಬಹಿರಂಗ ಸಮಾರೋಪ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಬಳ್ಳಾರಿ ನಗರದಾದ್ಯಂತ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರ ಅನ್ವಯ ಅಧಿಕಾರ ಚಲಾಯಿಸಿ ಈ ಆದೇಶ ಜಾರಿಗೊಳಿಸಲಾಗಿದೆ. ಅದರಂತೆ ಸೆಪ್ಟೆಂಬರ್ 10ರಂದು ಮಧ್ಯಾಹ್ನ 3 ಗಂಟೆಯಿಂದ ಸೆಪ್ಟೆಂಬರ್ 11ರಂದು ಮುಂಜಾನೆ 6 ಗಂಟೆಯವರೆಗೆ ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಬಳ್ಳಾರಿ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಕಡ್ಡಾಯವಾಗಿ ಮುಚ್ಚಬೇಕು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ನಿರ್ಬಂಧದ ಅವಧಿಯಲ್ಲಿ ಮದ್ಯದ ಮಾರಾಟ, ವಿತರಣೆ ಮತ್ತು ಸಾಗಣೆಗೆ ಅವಕಾಶ ಇರುವುದಿಲ್ಲ.
ಬಿಜೆಪಿ ಆಯೋಜಿಸಿರುವ ಬೃಹತ್ ಪಾದಯಾತ್ರೆಯ ಬಹಿರಂಗ ಸಮಾರೋಪ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಈ ನಿರ್ಬಂಧದ ಪ್ರಮುಖ ಉದ್ದೇಶವಾಗಿದೆ. ಆದೇಶ ಉಲ್ಲಂಘನೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















