SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ ESI ಆಸ್ಪತ್ರೆಗೆ MRI ಸ್ಕ್ಯಾನಿಂಗ್ ಸೌಲಭ್ಯ: ಸಚಿವ ಬಸವಂತಪ್ಪ ಭರವಸೆ

ದಾವಣಗೆರೆ ESI ಆಸ್ಪತ್ರೆಗೆ MRI ಸ್ಕ್ಯಾನಿಂಗ್ ಸೌಲಭ್ಯ: ಸಚಿವ ಬಸವಂತಪ್ಪ ಭರವಸೆ

0
79

ದಾವಣಗೆರೆ: ನಗರದ ESI ಆಸ್ಪತ್ರೆಗೆ ಭೇಟಿ ನೀಡಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಆಸ್ಪತ್ರೆಯ ಸ್ವಚ್ಛತೆ, ಆಡಳಿತ ವ್ಯವಸ್ಥೆ ಹಾಗೂ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಸಚಿವರು, ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ರೋಗಿಗಳು ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುತ್ತಿದ್ದು, ವೈದ್ಯರು ಮತ್ತು ಸಿಬ್ಬಂದಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು.

ಬಳಿಕ ಆಸ್ಪತ್ರೆಯ ಆಡಳಿತಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು, ಹಾಸಿಗೆಗಳ ಸಂಖ್ಯೆ ಹಾಗೂ ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.

ಸದ್ಯ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ಸೌಲಭ್ಯ ಇದ್ದು, 25 ಹಾಸಿಗೆಗಳನ್ನು ಪುರುಷರು ಮತ್ತು ಮಕ್ಕಳಿಗಾಗಿ ಹಾಗೂ 25 ಹಾಸಿಗೆಗಳನ್ನು ಮಹಿಳೆಯರಿಗಾಗಿ ಬಳಸಲಾಗುತ್ತಿದೆ. ಹೆಚ್ಚುವರಿಯಾಗಿ ಮತ್ತೊಂದು 50 ಹಾಸಿಗೆಗಳ ವಿಭಾಗದ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಆಸ್ಪತ್ರೆಯ ಸಾಮರ್ಥ್ಯ 100 ಹಾಸಿಗೆಗಳಿಗೆ ಏರಿಕೆಯಾಗಲಿದೆ ಎಂದು ಆಡಳಿತಾಧಿಕಾರಿ ಡಾ. ಜಿ.ಎಂ. ಬಸವನಗೌಡ ಸಚಿವರಿಗೆ ಮಾಹಿತಿ ನೀಡಿದರು.

ಆಸ್ಪತ್ರೆಗೆ ಅಗತ್ಯವಿರುವ ವಿವಿಧ ವೈದ್ಯಕೀಯ ಉಪಕರಣಗಳು ಹಾಗೂ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದಾವಣಗೆರೆ ESI ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸ್ವರೂಪಕ್ಕೆ ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಇದರಿಂದ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಲಾಯಿತು.

MRI ಸ್ಕ್ಯಾನಿಂಗ್‌ಗೆ ಮೊದಲ ಆದ್ಯತೆ : ಆಸ್ಪತ್ರೆಯಲ್ಲಿ ಅತ್ಯವಶ್ಯಕವಾಗಿರುವ MRI ಸ್ಕ್ಯಾನಿಂಗ್ ಸೌಲಭ್ಯವನ್ನು ಮೊದಲ ಆದ್ಯತೆಯಲ್ಲಿ ಕಲ್ಪಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವ ಕೆ.ಎಸ್. ಬಸವಂತಪ್ಪ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಸಂಬಂಧಪಟ್ಟ ಆಯುಕ್ತರೊಂದಿಗೆ ಚರ್ಚಿಸಿ, ದಾವಣಗೆರೆ ESI ಆಸ್ಪತ್ರೆಗೆ MRI ಸ್ಕ್ಯಾನಿಂಗ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಆಸ್ಪತ್ರೆಯ ವೈದ್ಯಕೀಯ ಸೌಲಭ್ಯಗಳು ಮತ್ತಷ್ಟು ಸುಧಾರಿಸಿದರೆ ಕಾರ್ಮಿಕರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸೆಗಾಗಿ ದೂರದ ಆಸ್ಪತ್ರೆಗಳನ್ನು ಅವಲಂಬಿಸುವ ಅಗತ್ಯ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ನಿವಾಸಿ ವೈದ್ಯಾಧಿಕಾರಿ ಡಾ. ಮಧುಕುಮಾರ್, ಶುಶ್ರೂಷಾ ಅಧೀಕ್ಷಕ ವರ್ಗ–2 ಗಣೇಶ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.