SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಹರಿಹರ ಮಠದ ₹10 ಕೋಟಿ ಅನುದಾನ ದುರುಪಯೋಗ ಆರೋಪ: ತನಿಖೆಗೆ ರಾಜ್ಯಪಾಲರ ಸೂಚನೆ

ಹರಿಹರ ಮಠದ ₹10 ಕೋಟಿ ಅನುದಾನ ದುರುಪಯೋಗ ಆರೋಪ: ತನಿಖೆಗೆ ರಾಜ್ಯಪಾಲರ ಸೂಚನೆ

0
72

ದಾವಣಗೆರೆ: ಹರಿಹರ ತಾಲೂಕಿನ ಅನಗೋಡು ಸಮೀಪದ ಮಠವೊಂದಕ್ಕೆ ವಸತಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿದ್ದ ಸುಮಾರು ₹10 ಕೋಟಿ ಅನುದಾನದ ಬಳಕೆ ಕುರಿತು ಕೇಳಿಬಂದಿರುವ ದುರುಪಯೋಗದ ಆರೋಪ ಇದೀಗ ತನಿಖೆಯ ಹಂತಕ್ಕೆ ಬಂದಿದೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ವಾಸ್ತವಾಂಶಗಳೊಂದಿಗೆ ವರದಿ ಸಲ್ಲಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಮಠದ ಟ್ರಸ್ಟ್ ವತಿಯಿಂದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಪಡೆದಿದ್ದ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಸಮರ್ಪಕವಾಗಿ ಬಳಸಿಕೊಳ್ಳದೆ ಅಕ್ರಮವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿತ್ತು.

ದೂರಿನಲ್ಲಿ ಮಾಡಲಾಗಿರುವ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ವಾಸ್ತವಾಂಶಗಳೊಂದಿಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಅಲ್ಲದೆ, ತನಿಖೆಯಲ್ಲಿ ಅಕ್ರಮ ಸಾಬೀತಾದಲ್ಲಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬೆಳವಣಿಗೆಯಿಂದ ಮಠಕ್ಕೆ ಮಂಜೂರಾದ 10 ಕೋಟಿ ಅನುದಾನದ ಬಳಕೆ, ಕಾಮಗಾರಿಗಳ ಅನುಷ್ಠಾನ ಹಾಗೂ ಹಣಕಾಸು ವ್ಯವಹಾರಗಳ ಕುರಿತು ತನಿಖೆ ನಡೆಯುವ ಸಾಧ್ಯತೆ ಇದೆ. ತನಿಖೆಯ ಬಳಿಕವೇ ಆರೋಪಗಳ ಸತ್ಯಾಸತ್ಯತೆ ಹಾಗೂ ಅನುದಾನದ ಬಳಕೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ ಎಂಬುದು ಸ್ಪಷ್ಟವಾಗಲಿದೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.