ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ.
ಗಾಂಧಿ ಜಯಂತಿಯಂದು ಮುಂಬೈನ ದಾದರ್ನಲ್ಲಿರುವ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಬೃಹತ್ ಧರಣಿ ನಡೆಯಿತು. ಬಾಲಿವುಡ್ ಸಂಗೀತ ಸಂಯೋಜಕ ವಿಶಾಲ್ ದದ್ಲಾನಿ, ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಸೇರಿದಂತೆ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಯುವಕರು ಮತ್ತು ಸಾರ್ವಜನಿಕರು ಭಾಗವಹಿಸಿ ಆಯೋಗದ ವಿರುದ್ಧ ಘೋಷಣೆ ಕೂಗಿದರು.
ಆಯೋಗದ ಇಬ್ಬರು ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ ಹತ್ತು ತಿಂಗಳುಗಳಲ್ಲಿ ಸುಮಾರು 14 ಬಾರಿ ಜ್ಞಾನೇಶ್ ಕುಮಾರ್ ಅವರ ನಿರ್ಧಾರಗಳಿಗೆ ಲಿಖಿತ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾಧ್ಯಮ ವರದಿ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
“ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಲು ನಾವು ಪದೇ ಪದೇ ಬೀದಿಗೆ ಇಳಿಯಬೇಕಾಗಿದೆ” ಎಂದು ಸಿಜೆಪಿ ಮುಖಂಡರು ಕಿಡಿಕಾರಿದ್ದಾರೆ. ಮುಂಬೈ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ, ಸಾವಿರಾರು ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು ಮೈದಾನದಲ್ಲಿ ಜಮಾಯಿಸಿದರು.
ಇದೇ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲೂ ವಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ. ದೆಹಲಿ ಮಾಜಿ ಸಿಎಂ ಅತಿಶಿ, ಆರ್ಜೆಡಿ ಮುಖಂಡ ಮನೋಜ್ ಝಾ ಸೇರಿದಂತೆ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಹಿತಕರ ಘಟನೆಗಳನ್ನು ತಡೆಯಲು ದೆಹಲಿಯ 11 ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಯಿತು. ಇತ್ತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಚುನಾವಣಾ ಅಕ್ರಮಗಳ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.





















