ದಾವಣಗೆರೆ: ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ಪಂಚಮಸಾಲಿ ಮಠದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಠದ ಆಸ್ತಿ ರಕ್ಷಣೆ ಹಾಗೂ ಶಾಂತಿ-ಸುವ್ಯವಸ್ಥೆ ಮುಂದುವರಿಸುವ ಹಿತದೃಷ್ಟಿಯಿಂದ ಅಕ್ಟೋಬರ್ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಈ ಕುರಿತು ಆದೇಶ ಹೊರಡಿಸಿದ್ದು, ಮಠದ ಆವರಣದಲ್ಲಿ ಧಾರ್ಮಿಕ ಪೂಜಾ ವಿಧಾನಗಳನ್ನು ಹೊರತುಪಡಿಸಿ ಯಾವುದೇ ರೀತಿಯ ಸಭೆ, ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಸುವುದನ್ನು ನಿರ್ಬಂಧಿಸಲಾಗಿದೆ.
ಮಠದ ಆವರಣದಲ್ಲಿ ಯಾವುದೇ ರೀತಿಯ ಗೊಂದಲ, ಅಶಾಂತಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.





















